ಚಿತ್ತಾಪುರ: ಕರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಸರಳವಾಗಿ ಉತ್ಸವ ನಡೆಸಲಾಗಿತ್ತು. ಈ ವರ್ಷ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಬಸವ ಜಯಂತಿ ಆಚರಿಸೋಣ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬಸವ ಜಯಂತಿ ನಿಮಿತ್ತ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಬೆಳಗ್ಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಸವೇಶ್ವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಬಳಿಕ ಹೋಳಿಕಟ್ಟಿ ಹಾಗೂ ಲಾಡ್ಜಿಂಗ್ ಕ್ರಾಸ್ ಬಳಿಯ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ತಹಸಿಲ್ ಕಚೇರಿ ಆವರಣದಲ್ಲಿ ಸಮಾರಂಭ ನಡೆಯಲಿದೆ ಎಂದರು.
ಎಪಿಎಂಸಿ ಅಧ್ಯಕ್ಷ ಸಿದ್ದುಗೌಡ ಅಫಜಲಪುರಕರ್ ಮಾತನಾಡಿ, ಜಯಂತಿಯಂದು ತಾಲೂಕಿನಾದ್ಯಂತ ಮಧ್ಯ ಹಾಗೂ ಮಾಂಸ ಮಾರಾಟ ನಿಷೇಧ ಮಾಡಬೇಕು. ಎಲ್ಲ ಅಧಿಕಾರಿಗಳಿಗೆ ಮೆರವಣಿಗೆ ಹಾಗೂ ಸಮಾರಂಭದಲ್ಲಿ ಭಾಗವಹಿಸಬೇಕೆಂದು ಸೂಚನೆ ನೀಡಬೇಕು ಎಂದು ಸಲಹೆ ನೀಡಿದರು.
ತಹಸೀಲ್ದಾರ್ ಉಮಾಕಾಂತ ಹಳ್ಳೆ ಅಧ್ಯಕ್ಷತೆ ವಹಿಸಿದ್ದರು.