ಕೆಂಭಾವಿ: ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಶೌಚಗೃಹ ಬಳಸಲು ಯೋಗ್ಯವಿಲ್ಲದ್ದರಿಂದ ಸಾರ್ವಜನಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದು, ಕೂಡಲೆ ಮೂಲಸೌಲಭ್ಯ ಕಲ್ಪಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ವಕ್ತಾರ ಶ್ರೀಶೈಲ ಕಾಚಾಪುರ ಆಗ್ರಹಿಸಿದ್ದಾರೆ.
ಒಂದು ಎಕರೆಗಿಂತ ಹೆಚ್ಚು ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಹೊಸ ಬಸ್ ನಿಲ್ದಾಣದಲ್ಲಿ ಸರಿಯಾದ ಶೌಚಗೃಹದ ವ್ಯವಸ್ಥೆ ಇಲ್ಲ. ಈ ಕುರಿತು ಅಧಿಕಾರಿಗಳಿಗೆ ಪ್ರಶ್ನೆ ಮಾಡಿದರೆ ಇನ್ನೂ ಕಾಮಗಾರಿ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ ಕಾಮಗಾರಿ ಯಾವಾಗ ಮುಗಿಯಲಿದೆ ಎಂಬ ಪ್ರಶ್ನೆಗೆ ಉತ್ತರವಿಲ್ಲ. ಜಿಲ್ಲಾಧಿಕಾರಿ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.
ಸಾಕಷ್ಟು ಸ್ಥಳಾವಕಾಶ ಇದ್ದರೂ ಬಸ್ ನಿಲ್ಲುವ ಸ್ಥಳ ಸಂಪೂರ್ಣ ಕೆಸರು ಗದ್ದೆಯಂತಾಗಿದೆ. ಪ್ರಯಾಣಿಕರು ಕೆಸರು ತುಳಿದೇ ಬಸ್ ಹತ್ತುವ ಪರಿಸ್ಥಿತಿ ಬಂದಿದೆ. ಕಾಂಪೌಂಡ್ ಸುತ್ತಮುತ್ತಲೂ ಮುಳ್ಳು-ಕಂಟಿ ಬೆಳೆದಿವೆ. ಕೆಲವು ಕಡೆ ಶಿಥಿಲಗೊಂಡಿದೆ. ಮುಂಬರುವ ದಿನಗಳಲ್ಲಿ ಎಲ್ಲ ಸೌಲಭ್ಯ ಕಲ್ಪಿಸಿ ನಿಲ್ದಾಣವನ್ನು ನವೀಕರಿಸಬೇಕೆಂದು ಕೆಕೆಆರ್‌ಟಿಸಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.