ಬಾಗಲಕೋಟೆ: ಜಿಲ್ಲೆಯಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗುವಂತೆ ಮಾಡುವ ನಿಟ್ಟಿನಲ್ಲಿ ನವನಗರದ ಬಸ್ ನಿಲ್ದಾಣಕ್ಕೆ ಆಗಮಿಸುವ ಬಸ್‌ಗಳನ್ನು ಏರಿ ಪ್ರಯಾಣಿಕರಿಗೆ ಕರ ಪತ್ರ ಹಂಚುವ ಮೂಲಕ ಮತದಾನ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಆದ ಜಿ.ಪಂ ಸಿಇಓ ಶಶಿಧರ ಕುರೇರ ಮುಂದಾದರು.
ಜಿಲ್ಲಾ ಸ್ವೀಪ್ ಸಮಿತಿಯು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನದ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ನವನಗರದ ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಮತದಾನ ಮಹತ್ವ ಸಾರಲು ಎಲ್‌ಇಡಿ ಪರದೆಯ ಮೂಲಕ ಮತದಾನ ಜಾಗೃತಿ ಗೀತೆಗಳ ವಿಡಿಯೋ ಪ್ರಸಾರಕ್ಕೆ ಚಾಲನೆ ನೀಡಿ ನಂತರ ಬಸ್ ನಿಲ್ದಾಣದಲ್ಲಿದ್ದ ಯುವಕರ, ಯುವತಿಯರಿಗೆ, ಹಿರಿಯ ನಾಗರಿಕರಿಗೆ ಹಾಗೂ ಇತರೆ ಅರ್ಹ ಮಹತದಾರರಿಗೆ ಜಾಗೃತಿಯ ಕರ ಪತ್ರಗಳನ್ನು ಹಂಚಿದರು.
ಅಲ್ಲದೇ ಬಸ್ ನಿಲ್ದಾಣಕ್ಕೆ ಬರುವ ಬಸ್‌ಗಳನ್ನು ಏರಿ ಬಸ್‌ನಲ್ಲಿರುವ ಪ್ರಯಾಣಿಕರಿಗೆ ಮತದಾನ ಜಾಗೃತಿಯ ಕರ ಪತ್ರಗಳನ್ನು ಹಂಚುವ ಮೂಲಕ ಪ್ರತಿಯೊಬ್ಬ ಮತದಾರರು ಬರುವ ಮೇ ೭ ರಂದು ತಪ್ಪದೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸುವಂತೆ ತಿಳಿಸಿದರು. ಮತದಾನದಲ್ಲಿ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಪಾಲ್ಗೊಳ್ಳಬೇಕು. ತಾವು ಮತದಾನ ಚಲಾಯಿಸುವದರ ಜೊತೆಗೆ ಮತದಾನದ ಮಹತ್ವವನ್ನು ಜನಸಾಮಾನ್ಯರಿಗೆ ತಿಳಿಯಪಡಿಸಬೇಕು ಎಂದರು.
ನಂತರ ಬಸ್ ನಿಲ್ದಾಣದಲ್ಲಿ ನೆರೆದ ಪ್ರಯಾಣಿಕರಿಗೆ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಶಶಿಧರ ಕುರೇರ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಜಾಪ್ರಭುತ್ವದಲ್ಲಿ ದೃಡವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡುಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಗಳಲ್ಲಿ ನಿರ್ಭಿತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಅಮರೇಶ ನಾಯಕ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾ ನಿರ್ದೇಶಕ ಪುನಿತ್, ಯೋಜನಾ ನಿರ್ದೇಶಕ ಶಶಿಕಾಂತ ಶಿವಪುರೆ, ನಗರಸಭೆ ಪೌರಾಯುಕ್ತ ವಾಸಣ್ಣ ಆರ್, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಜಿಲ್ಲಾ ಸಂಚಾರಿ ಅಧಿಕಾರಿ ಪಿ.ವಿ.ಮೈತ್ರಿ, ಬಾಗಲಕೋಟೆ ಘಟಕ ವ್ಯವಸ್ಥಾಪಕ ಎ.ಎ.ಕೋರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.