ಬೆಂಗಳೂರು ಗ್ರಾಮಾಂತರ: ಬಾಲ ಕಾರ್ಮಿಕರ ಮಾಹಿತಿ ಕಲೆ ಹಾಕಲು ಜಿಲ್ಲೆಯಲ್ಲಿ ಏ.25 ರಿಂದ ಮೇ 12ರವರೆಗೆ ಸಮೀಕ್ಷೆ ಕಾರ್ಯ ನಡೆಯಲಿದ್ದು, ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚಿಸಿದರು.
ದೇವನಹಳ್ಳಿ ತಾಲೂಕು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಾಲ ಕಾರ್ಮಿಕರ ಸಮೀಕ್ಷೆ ಕುರಿತ ಜಿಲ್ಲಾಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಬಾಲ ಕಾರ್ಮಿಕ ಪದ್ಧತಿ ನಿಯಂತ್ರಿಸುವುದು ಸಮೀಕ್ಷೆಯ ಉದ್ದೇಶವಾಗಿದ್ದು, ಕೇಂದ್ರ ಸರ್ಕಾರದ ನಿರ್ದೇಶನದಂತೆ, ಪ್ರತಿ 3 ವರ್ಷಕ್ಕೊಮ್ಮೆ ಬಾಲ ಕಾರ್ಮಿಕರ ಸಮೀಕ್ಷೆ ನಡೆಯಬೇಕಿದೆ ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ ಬಾಲ ಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರ ಸಮೀಕ್ಷೆ ನಡೆಸಲು ಅರ್ಹ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದ್ದು, ಅದರಂತೆ 3 ಸ್ವಯಂ ಸೇವಾ ಸಂಸ್ಥೆಗಳು ಆಯ್ಕೆಗೊಂಡಿವೆ. ಸೇವಾ ಸಂಸ್ಥೆಗಳ ಸಿಬ್ಬಂದಿಗೆ ಗ್ರಾಮಾಂತರ ಜಿಪಂ ಸಭಾಂಗಣದಲ್ಲಿ ಏ. 22ರಂದು ತರಬೇತಿ ಹಮ್ಮಿಕೊಳ್ಳಲಾಗುವುದು ಎಂದರು.
ವರದಿ ನೀಡಬೇಕು: ಸ್ವಯಂ ಸೇವಾ ಸಂಸ್ಥೆಯ ಮಾಹಿತಿ ಕ್ರೋಢೀಕರಿಸಿ ಸಂಪೂರ್ಣ ವರದಿಯನ್ನು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಗೆ ಮೇ 18ರೊಳಗೆ ಸಲ್ಲಿಸಬೇಕು. ತಾಲೂಕುಗಳಲ್ಲಿ ಸಮೀಕ್ಷೆ ನಡೆಸುವ ಸ್ವಯಂ ಸೇವಾ ಸಂಸ್ಥೆಯೊಂದಿಗೆ ಕಾರ್ಮಿಕ ನಿರೀಕ್ಷಕರು ಸಂಪರ್ಕದಲ್ಲಿದ್ದು, ಸಮೀಕ್ಷೆ ಪೂರ್ಣಗೊಳಿಸಿದ ನಂತರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ತಪಾಸಣೆ ಕೈಗೊಂಡು ವರದಿ ನೀಡಬೇಕು ಎಂದು ಡಿಸಿ ಸೂಚಿಸಿದರು.
ಠಾಣೆಯಲ್ಲಿ ದೂರು ದಾಖಲಿಸಬೇಕು: ಕೋವಿಡ್ ಸಂದರ್ಭದಲ್ಲಿ ಶಾಲೆಗಳು ಮುಚ್ಚಿದ್ದರಿಂದ ಪರಿಸ್ಥಿತಿ ಒತ್ತಡಕ್ಕೆ ಸಿಲುಕಿ ಮಕ್ಕಳು ದುಡಿಮೆಗೆ ಹೋಗಿರುವ ಸಾಧ್ಯತೆಗಳಿವೆ. ಸಮೀಕ್ಷೆಯಲ್ಲಿ 14 ವರ್ಷ ಮೇಲ್ಪಟ್ಟು ಹಾಗೂ 18 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಕ್ಷೇತ್ರಗಳಲ್ಲಿ ಕಂಡುಬಂದಲ್ಲಿ ಅಂಥ ಜಾಗದ ಮಾಲೀಕರ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿಗಳು ಕಡ್ಡಾಯವಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಕ್ರಮ ವಹಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ಶಿಕ್ಷಣ ಇಲಾಖೆ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಕಾನೂನು ಅರಿವು ಕಾರ್ಯಕ್ರಮಗಳು, ಜಾಥಾ ಹಾಗೂ ಬೀದಿ ನಾಟಕ ಆಯೋಜನೆ, ಗೋಡೆಬರಹ ಹಾಗೂ ಕರಪತ್ರ ಹಂಚುವುದು, ಬ್ಯಾನರ್ ಮತ್ತು ಫ್ಲೆಕ್ಸ್ ಅಳವಡಿಕೆ ಮೂಲಕ ಜಾಗೃತಿಗೊಳಿಸುವ ಕೆಲಸವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಬಾಲಕಾರ್ಮಿಕ ಕಾಯ್ದೆಯಡಿ ನೇಮಕಗೊಂಡ ಎಲ್ಲಾ ಅಧಿಕಾರಿಗಳು ಸಮೀಕ್ಷೆಗೆ ಸಹಕಾರ ನೀಡಿ ಯಶಸ್ವಿಯಾಗಿ ನಿರ್ವಹಿಸಬೇಕೆಂದು ತಿಳಿಸಿದರು.