ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಡಿಸಿ ಎಂ.ಜಿ. ಹಿರೇಮಠ ಮಾತನಾಡಿದರು. ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂಧಿಹಟ್ಟಿ , ಭಾರತಿ ವಾಳ್ವೇಕರ್, ಟಿ.ಬೆಂಗಾಲಿ, ಜ್ಯೋತಿ ಕಾಂತೆ ಇತರರು ಇದ್ದರು. 
ಜಿಲ್ಲೆ

ಬಾಲ ಕಾರ್ಮಿಕರನ್ನು ಬಳಸಿಕೊಂಡರೆ ಕಠಿಣ ಕ್ರಮ

ಬೆಳಗಾವಿ: ಬಾಲಕಾರ್ಮಿಕ ಪದ್ಧತಿ ವಿರುದ್ಧ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಅಂತಹ ಮಕ್ಕಳ ಸಮೀಕ್ಷೆಗೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ನೆರವು ನೀಡಲಾಗುವುದು. ಯಾರಾದರೂ ಬಾಲ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಸಮೀಕ್ಷೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಮಕ್ಕಳ ಹಕ್ಕುಗಳ ಹಿತರಕ್ಷಣೆ ದೃಷ್ಟಿಯಿಂದ ನಾವುಗಳು ಕೆಲಸ ಮಾಡಬೇಕಿದೆ. ಬಾಲ ಕಾರ್ಮಿಕರು ಕಂಡುಬಂದಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲ ತಹಸೀಲ್ದಾರರು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

ಪ್ರಕರಣ ದಾಖಲಿಸಿ: ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಮೀಕ್ಷೆಗಿಂತ ಮುಂಚೆ ಅನಿರೀಕ್ಷಿತ ಭೇಟಿಯ ಮೂಲಕ ಪರಿಶೀಲನೆ ನಡೆಸಿ, ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಬೇಕು. ಇದರಿಂದ ಬಾಲ ಕಾರ್ಮಿಕ ಪದ್ಧತಿ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳು ಬಾಲಕಾರ್ಮಿಕ ಪದ್ಧತಿ ತಡೆಗೆ ಮಾರ್ಗಸೂಚಿ ಪ್ರಕಾರ ಸಮರ್ಪಕವಾಗಿ ಸಮೀಕ್ಷೆ ಕೈಗೊಳ್ಳಬೇಕು ಎಂದು ಡಿಸಿ ಹಿರೇಮಠ ಸೂಚಿಸಿದರು. ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ ಮಾತನಾಡಿ, ಕೋವಿಡ್-19 ಹಿನ್ನೆಲೆಯಲ್ಲಿ ಅನೇಕ ಮಕ್ಕಳು ಶಿಕ್ಷಣದಿಂದ ಹೊರಗುಳಿದಿದ್ದು, ಈ ಕುರಿತು ಸಮೀಕ್ಷೆ ನಡೆಸಲಾಗುವುದು. ಕಾಯ್ದೆ ತಿದ್ದುಪಡಿ ಪ್ರಕಾರ 14 ವರ್ಷದೊಳಗಿನ ಮಕ್ಕಳು ಕೆಲಸ ಮಾಡುವುದನ್ನು ನಿಷೇಧಿಸಲಾಗಿದೆ. ಬಾಲಕಾರ್ಮಿಕ ಪದ್ಧತಿ ಕಂಡುಬಂದಾಗ ಸಂಬಂಧಿಸಿದ ಅಧಿಕಾರಿಗಳು ಮಾತ್ರವಲ್ಲದೆ, ಯಾರು ಬೇಕಾದರೂ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಮಕ್ಕಳ ರಕ್ಷಣಾ ಆಯೋಗದ ಸದಸ್ಯೆ ಭಾರತಿ ವಾಳ್ವೇಕರ್, ಟಿ.ಬೆಂಗಾಲಿ, ಜ್ಯೋತಿ ಕಾಂತೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.