ವಿಜಯವಾಣಿ ಸುದ್ದಿಜಾಲ ಧಾರವಾಡ
ಕಲಿಕೆಯನ್ನು ಸಮುದಾಯದ ಕಣ್ಣೆದುರು ತರುವ ಮಹತ್ವದ ಪ್ರಯತ್ನ ಕಲಿಕಾ ಹಬ್ಬವಾಗಿದೆ. ಪ್ರತಿ ತರಗತಿಯೂ ಮಗುವಿಗೆ ಹಬ್ಬವಾಗಬೇಕು. ಮಗು ತನ್ನ ಬಾಲ್ಯವನ್ನು ಸಂಭ್ರಮಿಸಬೇಕಾದರೆ ಕಲಿಕೆಯು ಹಬ್ಬವಾಗಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು.
ನಗರದ ಸಾಧನಕೇರಿಯ ಆದರ್ಶ ವಿದ್ಯಾಲಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಹಂತದ ಹಾಗೂ ಧಾರವಾಡ ಗ್ರಾಮೀಣ ವಲಯದ ಕಲಿಕಾ ಹಬ್ಬ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕಿ ಎನ್.ಕೆ. ಸಾಹುಕಾರ ಮಾತನಾಡಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಲಿಕಾ ಚೇತರಿಕೆಯ ಚಟುವಟಿಕೆಗಳನ್ನು ಇನ್ನಷ್ಟು ಉತ್ತಮೀಕರಿಸಲು ಹಾಗೂ ಗುಣಾತ್ಮಕ ಶಿಕ್ಷಣವನ್ನು ಗಟ್ಟಿಗೊಳಿಸಲು ಕಲಿಕಾ ಹಬ್ಬ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ಮಾತನಾಡಿ, ಕಲಿಕಾ ಹಬ್ಬದಲ್ಲಿ ವಿದ್ಯಾರ್ಥಿಗಳು ಪರಸ್ಪರ ಚರ್ಚಿಸಿ, ತಾರ್ಕಿಕವಾಗಿ ಆಲೋಚಿಸಿ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಉಪ ಯೋಜನಾಧಿಕಾರಿ ಜಿ.ಎನ್. ಮಠಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರ್.ಎಂ.ಎಸ್.ಎ ಉಪ ಯೋಜನಾಧಿಕಾರಿ ಎಸ್.ಎಂ. ಹುಡೇದಮನಿ ನಿರ್ವಹಿಸಿದರು. ಬಿಇಒಗಳಾದ ಗಿರೀಶ ಪದಕಿ, ಉಮೇಶ ಬಮ್ಮಕ್ಕನವರ, ಸಿಆರ್‌ಪಿ, ಬಿಆರ್‌ಪಿ ಹಾಗೂ ಶಿಕ್ಷಕರಿದ್ದರು.