ಜಿಲ್ಲೆ

ಬಾಲ್ಯವಿವಾಹ ಸಮಾಜಕ್ಕೆ ಕಳಂಕವಾಗಿ ಪರಿಣಮಿಸಿದೆ

ಚಾಮರಾಜನಗರ: ಸುಶಿಕ್ಷಿತ ಸಮಾಜ ನಿರ್ಮಾಣದಿಂದ ಬಾಲ್ಯವಿವಾಹದ ಸಂಪೂರ್ಣ ನಿರ್ಮೂಲನೆ ಸಾಧ್ಯವಾಗಲಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ಅಧ್ಯಕ್ಷ ಕೆ.ಸೋಮಶೇಖರ್ ತಿಳಿಸಿದರು.

ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ನಗರಸಭೆ ಹಾಗೂ ಮೈಸೂರಿನ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ಸಹಯೋಗದಲ್ಲಿ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಪರಿವರ್ತಿಸಲು ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಸಾಮರ್ಥ್ಯಾಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಸತಿಪದ್ದತಿ ಕಾಲದಿಂದಲೂ ಬಾಲ್ಯವಿವಾಹ ಸಾಮಾಜಕ್ಕೆ ಕಳಂಕವಾಗಿ ಪರಿಣಮಿಸಿದೆ. ಬಾಲ್ಯವಿವಾಹ ನಿರ್ಮೂಲನೆಗೆ ಸರ್ಕಾರದಿಂದ ಹಲವು ಕಾಯ್ದೆಗಳನ್ನು ಜಾರಿಗೊಳಿಸಿದ್ದರೂ ಅಲ್ಲಲ್ಲಿ ಪ್ರಕರಣಗಳು ದಾಖಲಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಬಾಲ್ಯವಿವಾಹದ ಪರಿಣಾಮಗಳ ಕುರಿತು ಜನರಿಗೆ ಅರಿವು ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಶಿಕ್ಷಣ ಪಡೆದು ಜ್ಞಾನ ವೃದ್ಧಿಸಿಕೊಳ್ಳಬೇಕು. ಮಕ್ಕಳಿಗೆ ಸುರಕ್ಷತೆ ಒದಗಿಸಬೇಕಿದೆ. ಸುಶಿಕ್ಷಿತ ಸಮಾಜ, ಗ್ರಾಮ, ತಾಲೂಕು, ಜಿಲ್ಲೆ, ರಾಜ್ಯ ಹಾಗೂ ದೇಶ ನಿರ್ಮಾಣವಾಗಬೇಕು. ಆಗಮಾತ್ರ ಬಾಲ್ಯವಿವಾಹ ಸಂಪೂರ್ಣ ನಿಯಂತ್ರಣಕ್ಕೆ ಬರಲಿದೆ ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ ಮಾತನಾಡಿ, ಬಾಲ್ಯವಿವಾಹ ಸಾಮಾಜಿಕ ಪಿಡುಗಾಗಿದೆ. ಹೆಣ್ಣಿಗೆ 18, ಗಂಡಿಗೆ 21 ವರ್ಷ ತುಂಬಿದ ಬಳಿಕವೇ ಮದುವೆ ಬಗ್ಗೆ ಪಾಲಕರು ಚಿಂತಿಸಬೇಕು. ಮುಖ್ಯವಾಗಿ ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಮೂಲಕ ಬಾಲ್ಯವಿವಾಹ ಸಂಪೂರ್ಣ ನಿರ್ಮೂಲನೆಗೆ ಮುಂದಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್. ಭಾರತಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಓ ಮೋನಾ ರೋತ್, ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ, ರಾಜ್ಯ ಶಿಕ್ಷಣ ನೀತಿ ಆಯೋಗದ ಸದಸ್ಯ ಪ್ರೊ.ವಿ.ಪಿ.ನಿರಂಜನಾರಾಧ್ಯ, ಬಚಪನ್ ಬಚಾವೋ ಆಂದೋಲನದ ರಾಜ್ಯ ಸಂಯೋಜಕ ಬಿನು ವರ್ಗಿಸ್, ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಕಾರ್ಯದರ್ಶಿ ಕೆ.ವಿ.ಸ್ಟ್ಯಾನ್ಲಿ, ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ ನಿರ್ದೇಶಕಿ ಸರಸ್ವತಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಲತಾ ಹಾಗೂ ಇತರರು ಹಾಜರಿದ್ದರು.

ಬಾಲ್ಯವಿವಾಹ ಮುಕ್ತಕ್ಕೆ ಶ್ರಮಿಸೋಣ:

ಜಿಲ್ಲೆಯನ್ನು ನ.14 ರ ಮಕ್ಕಳ ದಿನಾಚರಣೆ ವೇಳೆಗೆ ಬಾಲ್ಯ ವಿವಾಹ ಮುಕ್ತಗೊಳಿಸಲು ಪ್ರತಿಯೊಬ್ಬರು ಶ್ರಮಿಸಬೇಕಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು. ಜಿಲ್ಲೆಯ 130 ಗ್ರಾಮಪಂಚಾಯಿತಿಗಳಲ್ಲಿ ಸಾಕಷ್ಟು ಮಹಿಳಾ ಅಧ್ಯಕ್ಷರು, ಸದಸ್ಯರಿದ್ದಾರೆ. ಎಲ್ಲಾ ಗ್ರಾಮಗಳು, ವಾರ್ಡ್‌ಗಳಲ್ಲಿ ಬಾಲ್ಯವಿವಾಹ ನಿರ್ಮೂಲನೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು. ಆ ಮೂಲಕ ಮೊದಲು ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿ ಅಭಿಯಾನ ಕೈಗೊಳ್ಳಬೇಕು. ಹೆಚ್ಚಿನ ಪ್ರಗತಿ ಸಾಧಿಸುವ ಗ್ರಾ.ಪಂ ಗೆ ಪ್ರಶಸ್ತಿ ನೀಡುವ ಯೋಜನೆ ಇದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿಭಾಯಿಸಿ ಜನಪ್ರತಿನಿಧಿಗಳು, ಸಾರ್ವಜನಿಕರು ಸೇರಿದಂತೆ ಎಲ್ಲರ ಸಹಕಾರ ಪಡೆದು ಸಂಪೂರ್ಣ ನಿಯಂತ್ರಣಕ್ಕೆ ದೃಢಸಂಕಲ್ಪ ಮಾಡೋಣ. ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಪಣ ತೋಡೋಣ ಎಂದರು.