ಮೈಸೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಯಂತಹ ಅಮಾಯಕರನ್ನು ಸಿಲುಕಿಸಲು ಕೇಂದ್ರ ಬಿಜೆಪಿ ಸರ್ಕಾರ ನಡೆಸಿದ ಕುತಂತ್ರಕ್ಕೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಕೊನೆಗೂ ಸತ್ಯಕ್ಕೆ ಜಯ ದೊರಕಿದಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಮುಡಾದಲ್ಲಿ ಸಿಎಂ ಪತ್ನಿ ಪಾರ್ವತಿ ಅವರು ಕಾನೂನು ಪ್ರಕಾರವಾಗಿಯೇ ನಿವೇಶನ ನೋಂದಣಿ ಮಾಡಿಸಿಕೊಂಡಿದ್ದರು. ಕಾನೂನು ಪ್ರಕಾರವೇ ಎಲ್ಲ ವ್ಯವಹಾರ ನಡೆದಿತ್ತು.
ಹೀಗಿದ್ದರೂ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಸ್ತಕ್ಷೇಪ ಮಾಡುವ ಮೂಲಕ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಂಡಿದ್ದರು. ಎಫ್‌ಐಆರ್ ರದ್ದುಪಡಿಸಿ ಹೈಕೋರ್ಟ್ ಆದೇಶ ನೀಡಿದ್ದನ್ನು ಪ್ರಶ್ನಿಸಿದ್ದ ಇಡಿ ಕ್ರಮಕ್ಕೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ
ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಿಬಿಐ, ಐಟಿ, ಇಡಿ ಸೇರಿದಂತೆ ಪ್ರಮುಖ ಸ್ವಾಯತ್ತ ತನಿಖಾ ಸಂಸ್ಥೆಗಳನ್ನು ತಮ್ಮ ರಾಜಕೀಯ ಎದುರಾಳಿ ಮಣಿಸಲು ಬಳಸುತ್ತಿರುವ ಬಗ್ಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರು ಕಳವಳ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಬಿಜೆಪಿ ನಾಯಕರ ನಿಜ ಬಣ್ಣ ಬಯಲಾಗಿದೆ ಎಂದು ಕಿಡಿಕಾರಿದ್ದಾರೆ.
ಐದು ದಶಕಗಳಿಂದ ಪ್ರಾಮಾಣಿಕವಾಗಿ ರಾಜಕಾರಣ ಮಾಡಿಕೊಂಡು ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ತಪ್ಪು ಮಾಡಿಲ್ಲ. ಜತೆಗೆ, ಸಿಎಂ ಪತ್ನಿ ಪಾರ್ವತಿ ಅವರನ್ನು ಇಡಿ ಅಧಿಕಾರಿಗಳು ಸಿಲುಕಿಸಿ ಮಾನಸಿಕ ಹಿಂಸೆ ನೀಡಿದ್ದರು. ಆದರೆ, ಸತ್ಯಕ್ಕೆ ಕೊನೆಗೂ ಜಯ ಸಿಗಲಿದೆ ಎಂಬುದಕ್ಕೆ ಸುಪ್ರೀಂ ತೀರ್ಪು ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.
ಇಡಿ ಎಫ್‌ಐಆರ್ ಹಾಕಿದ್ದನ್ನು ಬಳಸಿಕೊಂಡಿದ್ದ ಬಿಜೆಪಿ ನಾಯಕರು ಮುಂದಾದರೂ ಬಾಯಿಗೆ ಬೀಗ ಹಾಕಿಕೊಂಡು ಸುಮ್ಮನಿರಬೇಕು. ರಾಜಕೀಯ ದಾಳಕ್ಕೆ ಬಳಸಿಕೊಳ್ಳುವುದನ್ನು ಬಿಟ್ಟು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯದಡಿ ಕೆಲಸ ಮಾಡಬೇಕು ಎಂದು ಕುಟುಕಿದ್ದಾರೆ.