ದಾವಣಗೆರೆ: ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ ಪರ ಅಭಿಯಾನ ಹೆಸರಿನಲ್ಲಿ ಹೋರಾಟ ಮಾಡುತ್ತಿರುವ ಬಿಜೆಪಿ ವಿರುದ್ಧ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಶನಿವಾರ, ಬಡಾವಣೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಭ್ರಷ್ಟಾಚಾರದ ಆರೋಪದ ಬರಹದೊಂದಿಗೆ ಬಿಜೆಪಿ ಮುಖಂಡರ ಭಾವಚಿತ್ರಗಳುಳ್ಳ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಮಾತನಾಡಿ ಶ್ರೀಕಾಂತ ಪೂಜಾರಿ ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟಿದ್ದಾರೆ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕ ಮಾಡುತ್ತಿದ್ದಾರೆ. ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಡಬೇಕೆ ಎಂದು ಪ್ರಶ್ನಿಸಿದರು.
ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟ್ಕಾ, ಜೂಜಾಟ ಮೊದಲಾದ 16 ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು, ಈತನ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಇಲ್ಲವೇ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ ಎಂದು ಆಗ್ರಹಿಸಿದರು.
ರಾಮಮಂದಿರದ ಉದ್ಘಾಟನೆ ವೇಳೆ ಶ್ರೀಕಾಂತ ಪೂಜಾರಿಯ ಬಂಧನವಾಗಿರುವುದು ಕಾಕತಾಳೀಯ ಮಾತ್ರ. ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು 36 ಜನರ ಜತೆಗೆ ಇವರನ್ನು ಕೂಡ ಬಂಧಿಸಿದ್ದಾರೆ. ಇದರಲ್ಲಿ ಯಾವುದೇ ಪ್ರತೀಕಾರವಾಗಲೀ, ತುಷ್ಟೀಕರಣವೂ ಇಲ್ಲ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಎಲ್.ಎಚ್. ಸಾಗರ್, ಶ್ರೀಕಾಂತ್ ಬಗೇರ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಬಾಯಿ ಮಾಲತೇಶ್, ದಾಕ್ಷಾಯಣಮ್ಮ, ರಾಜೇಶ್ವರಿ ಇತರರಿದ್ದರು.