ಗೋಣಿಕೊಪ್ಪ: ಬಿಜೆಪಿ ಸರ್ಕಾರ ಮಹಿಳೆಯರಿಗೆ ಸ್ಥಾನಮಾನ ನೀಡದೆ ತಾತ್ಸಾರ ಮಾಡಿದೆ ಎಂದು ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಡಾ. ಪುಷ್ಪಾ ಅಮರ್‌ನಾಥ್ ಆರೋಪಿಸಿದರು.
ಶುಕ್ರವಾರ ಪೊನ್ನಂಪೇಟೆ ಕೊಡವ ಸಮಾಜ ಸಭಾಂಗಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಮಹಿಳಾ ಸಮಾವೇಶದಲ್ಲಿ ಮಾತನಾಡಿ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸ್ಥಾನಮಾನ ನೀಡಿಲ್ಲ. ಇದು ಮಹಿಳೆಯರನ್ನು ಬೀದಿಗಿಳಿದು ಹೋರಾಟ ಮಾಡುವಂತಹ ಹಂತಕ್ಕೆ ತಲುಪಿದೆ. ಮಹಿಳೆಯರಿಗೆ ರಕ್ಷಣೆ ಇಲ್ಲ. ದಿನಬಳಕೆ ವಸ್ತುಗಳ ಬೆಲೆ ಏರಿಕೆ ಪೆಟ್ಟಾಗಿದೆ. ಮಹಿಳೆಯರೊಂದಿಗೆ ಯುವ ಜನಾಂಗಕ್ಕೂ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ. ಶೇ.40 ಕಮಿಷನ್ ಪಡೆದುಕೊಂಡು ಅಭಿವೃದ್ಧಿ ಮರೆತ್ತಿದ್ದಾರೆ ಎಂದು ಆರೋಪಿಸಿದರು. ಸುಳ್ಳು ಭರವಸೆಗೆ ಮತ ನೀಡದೆ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಆಡಳಿತ ನೀಡಬೇಕು ಎಂದು ಮನವಿ ಮಾಡಿಕೊಂಡರು.
ಮಾಜಿ ಎಂಎಲ್‌ಸಿ ವೀಣಾ ಅಚ್ಚಯ್ಯ ಮಾತನಾಡಿ, ಕಾಂಗ್ರೆಸ್ ಪಕ್ಷ ಜಿಲ್ಲೆಯಿಂದ ರಾಜ್ಯಸಭೆ, ವಿಧಾನಸಭೆ, ವಿಧಾನಪರಿಷತ್, ಬೆಂಗಳೂರು ಮೇಯರ್ ಸ್ಥಾನದವರೆಗೂ ಮಹಿಳೆಯರಿಗೆ ಅವಕಾಶ ನೀಡಿ ಬೆಳೆಸಿದೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕಿದೆ. ಮಹಿಳೆಯರನ್ನು ಗೌರವಿಸುವ ಪಕ್ಷವಾಗಿದೆ ಎಂದರು.
ಕೆಪಿಸಿಸಿ ಕಾನೂನು ಘಟಕ ಅಧ್ಯಕ್ಷ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಮಾತನಾಡಿ, ಜಿಲ್ಲೆಯ ಎರಡು ಕ್ಷೇತ್ರದಲ್ಲಿ ಜನರು ಬದಲಾವಣೆ ಬಯಸಿದ್ದಾರೆ. ಮೇ ತಿಂಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ.ಗಳು ಬ್ಯಾಂಕ್ ಖಾತೆಗೆ ಜವಾವಣೆಯಾಗಲಿದ್ದು, ಮನೆಯ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿರುವ ಮಹಿಳೆಯರು ಬ್ಯಾಂಕ್ ಖಾತೆ ತೆರೆಯಬೇಕಿದೆ ಎಂದರು.
ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷೆ ಕೋಳೇರ ಭಾರತಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಾಜಿ ಅಧ್ಯಕ್ಷ ಶಿವು ಮಾದಪ್ಪ, ಮಾಜಿ ಎಂಎಲ್ಸಿ ಅರುಣ್ ಮಾಚಯ್ಯ ಇದ್ದರು.