ಜಿಲ್ಲೆ

ಬೆಳೆ ಹಾನಿ ಸಮೀಕ್ಷೆ ವರದಿ ಸಲ್ಲಿಸಿ

ಚಾಮರಾಜನಗರ: ಪ್ರಕೃತಿ ವಿಕೋಪದಿಂದ ಉಂಟಾಗಿರುವ ಬೆಳೆ ಹಾನಿಗೆ ಪರಿಹಾರ ನೀಡುವ ಸಂಬಂಧ ಮೂರು ದಿನಗಳೊಳಗೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೇಸ್ವಾನ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳು ಸಭೆ ನಡೆಸಿ ಅತಿವೃಷ್ಟಿ, ಬೆಳೆಹಾನಿ ಸೇರಿದಂತೆ ಮುಂಗಾರು ಅವಧಿಯಲ್ಲಿನ ಇನ್ನಿತರ ನಷ್ಟ ಸಂಬಂಧ ವಿವರವಾಗಿ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಬೆಳೆ ಹಾನಿ ಪರಿಹಾರ ಸಂಬಂಧ ಶೀಘ್ರ ವರದಿ ಸಲ್ಲಿಸಬೇಕಿದೆ. ಹೀಗಾಗಿ ಜಿಲ್ಲೆಯಲ್ಲಿ ಯಾವುದೇ ಪ್ರದೇಶಗಳು ಬಿಟ್ಟುಹೋಗದಂತೆ ಪರಿಪೂರ್ಣವಾಗಿ ಮೂರು ದಿನಗಳೊಳಗೆ ಸಂಬಂಧಪಟ್ಟ ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ನೀಡಬೇಕು ಎಂದು ತಿಳಿಸಿದರು.

ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ. ಹನೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ಸಮಸ್ಯೆಯಾಗದಿರಲು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ತಹಸೀಲ್ದಾರರು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಗ್ರಾಮೀಣ ಭಾಗದ ಅಧಿಕಾರಿಗಳು ಭೇಟಿ ನೀಡಿ ಕುಡಿಯುವ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡುವ ನಿಟ್ಟಿನಲ್ಲಿ ಮುಂದಾಗಬೇಕು ಎಂದರು.

ನರೇಗಾ ಅಡಿ ಜಲ ಮರುಪೂರಣ ಸಂರಕ್ಷಣೆಯಂತಹ ಕಾಮಗಾರಿಯನ್ನು ಕೈಗೊಳ್ಳಬೇಕು. ಶಾಶ್ವತವಾಗಿ ನೀರು ಒದಗಿಸುವ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ಕುಡಿಯುವ ನೀರಿನ ತೊಂದರೆ ಎದುರಾಗಬಹುದಾದ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಲು ಶೀಘ್ರ ಮುಂದಾಗಬೇಕು. ಯಾವುದೇ ದೂರುಗಳು ಬರದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದರು.

ಅಂಗನವಾಡಿ ಕಟ್ಟಡ ನಿರ್ಮಾಣ, ಸ್ಮಶಾನ ಇನ್ನಿತರ ಜಾಗಗಳಿಗೆ ಕೋರಿಕೆ ಇರುವ ಅರ್ಜಿಗಳಿಗೆ ಆದ್ಯತೆ ನೀಡಿ ಜಮೀನು ಮಂಜೂರು ಮಾಡಬೇಕು. ಸರ್ಕಾರಿ ಭೂಮಿ ಲಭ್ಯವಿಲ್ಲದಿದ್ದಲ್ಲಿ ಖಾಸಗಿ ಭೂಮಿಯನ್ನು ಖರೀದಿಸಿ ನೀಡಲು ಅವಕಾಶವಿದೆ. ಹೀಗಾಗಿ ಶೀಘ್ರ ಜಮೀನು ನೀಡುವ ಕಾರ್ಯವನ್ನು ತಹಸೀಲ್ದಾರರು ಮಾಡಬೇಕು. ನಂದಿನಿ ಮಿಲ್ಕ್ ಪಾರ್ಲರ್‌ಗಳ ಸ್ಥಾಪನೆಗೆ ಜಾಗ ಗುರುತಿಸಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಈ ಸಂಬಂಧ ಕ್ರಮವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶೃತಿ, ತಹಸೀಲ್ದಾರರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.