ಜಿಲ್ಲೆ

ಭಯ ಬಿಡಿ, ಇರಲಿ ಜಾಗೃತಿ

Gadag

ಗದಗ: ಮನುಷ್ಯ ಹಾಗೂ ಪ್ರಾಣಿಗಳಲ್ಲಿ ಉಸಿರಾಟ ಹಾಗೂ ಶ್ವಾಸಕೋಶಕ್ಕೆ ತೊಂದರೆ ಉಂಟು ಮಾಡುವ ಕರೊನಾ ವೈರಸ್ ಬಗ್ಗೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಆದರೆ, ಜಾಗೃತಿ ವಹಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಆಯೋಜಿಸಿದ್ದ ಕರೊನಾ ವೈರಸ್ ತಡೆಗಟ್ಟಲು ರಚಿಸಲಾಗಿರುವ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಗ್ರಾಮ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳು ಹಾಗೂ ಕೆಲಸಕ್ಕಾಗಿ ವಲಸೆ ಹೋಗಿ ಬರುವ ಜನಗಳಿರುವ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಪ್ರಮುಖವಾಗಿ ತಾಂಡಾಗಳಿಂದ ಕೆಲಸಕ್ಕಾಗಿ ಗೋವಾ ಹಾಗೂ ಮಂಗಳೂರು ಪ್ರದೇಶಗಳಿಗೆ ಹೋಗಿ ಬರುವ ಜನರ ಮೇಲೆ ತೀವ್ರ ನಿಗಾ ಇಡಬೇಕು. ಈ ತಾಂಡಾಗಳಲ್ಲಿ ಕರೊನಾ ವೈರಸ್ ತಡೆಗಟ್ಟಲು ಆರೋಗ್ಯ ಇಲಾಖೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಗ್ರಾಮ ಪಂಚಾಯಿತಿಗಳಿಗೆ ಸುತ್ತೋಲೆ ಹೊರಡಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಸಿಬ್ಬಂದಿಯೊಂದಿಗೆ ಶಾಲೆಗಳು, ಖಾಸಗಿ ಆಸ್ಪತ್ರೆಗಳು, ಪೊಲೀಸ್ ಸೇರಿ ವಿವಿಧ ಇಲಾಖೆಗಳ ಸಿಬ್ಬಂದಿಯೊಂದಿಗೆ ಸಂಯೋಜನೆ ಮೂಲಕ ಗ್ರಾಮ ಪಂಚಾಯಿತಿಯ ಪ್ರತಿ ವಾರ್ಡ್​ಗಳಲ್ಲೂ ಕರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಬೇಕು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ವಾರ್ಡ್​ಗಳಲ್ಲಿ ಪೌರಾಯುಕ್ತರು ಹಾಗೂ ಮುಖ್ಯಾಧಿಕಾರಿಗಳ ಜತೆಗೆ ಆರೋಗ್ಯ ಇಲಾಖೆ ಜನರಿಗೆ ಅಗತ್ಯ ತಿಳಿವಳಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

ಗೋವಾ ಮತ್ತು ಮಂಗಳೂರಿಗೆ ಹೋಗಿ ಬರುವ ರಾಜ್ಯ ರಸ್ತೆ ಸಾರಿಗೆ ಬಸ್​ಗಳಲ್ಲಿ ಸಂಚರಿಸುವ ಚಾಲಕ ಹಾಗೂ ನಿರ್ವಾಹಕರು ಕಟ್ಟಾಯವಾಗಿ ಮಾಸ್ಕ್​ಗಳನ್ನು ಬಳಸಲು ಆರೋಗ್ಯ ಇಲಾಖೆಯ ಎಲ್ಲ ವೈದ್ಯಾಧಿಕಾರಿಗಳು ಕ್ರಮ ಜರುಗಿಸಬೇಕು. ಕರೊನಾ ವೈರಸ್ ಸೋಂಕಿನ ಲಕ್ಷಣಗಳು ಕಂಡು ಬರುವ ಪ್ರಯಾಣಿಕರ ಕುರಿತು ನಿಗಾ ವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ, ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ., ಜಿ.ಪಂ. ಯೋಜನಾ ನಿರ್ದೇಶಕ ಸಿ.ಆರ್. ಮುಂಡರಗಿ, ಜಿಮ್್ಸ ಆಸ್ಪತ್ರೆಯ ಅಧೀಕ್ಷಕ ಜಿ.ಎಸ್. ಪಲ್ಲೇದ, ಇತರರು ಭಾಗವಹಿಸಿದ್ದರು.

ಸಂಪರ್ಕ ಸಂಖ್ಯೆ ದಾಖಲಿಸಲು ಮನವಿ: ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ವೈ.ಕೆ. ಭಜಂತ್ರಿ ಮಾತನಾಡಿ, ತಾಂಡಾಗಳಿಂದ ಗೋವಾ ಮತ್ತು ಮಂಗಳೂರಿಗೆ ಹೋಗಿ ಬರುವ ಜನರು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಮ್ಮ ಹೆಸರು ಹಾಗೂ ಸಂಪರ್ಕ ಸಂಖ್ಯೆಯನ್ನು ಕಡ್ಡಾಯವಾಗಿ ದಾಖಲಿಸಬೇಕು. ಕರೊನಾ ಸೋಂಕಿನ ಲಕ್ಷಣಗಳಾದ ತೀವ್ರ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯುಮೋನಿಯಾ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಸಮೀಪದ ಪ್ರಾಥಮಿಕ ಕೇಂದ್ರ, ತಾಲೂಕು ಅಥವಾ ಜಿಲ್ಲಾ ಆಸ್ಪತ್ರೆಯನ್ನು ಸಂರ್ಪಸಬೇಕು ಎಂದು ಮನವಿ ಮಾಡಿದರು.

ಮಾಹಿತಿ ನೀಡಿ: ಜಿಲ್ಲಾಸ್ಪತ್ರೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕರೊನಾ ವಿಶೇಷ ವಾರ್ಡ್ ಸ್ಥಾಪಿಸಬೇಕು. ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಬರುವ ರೋಗಿಗಳಲ್ಲಿ ಕರೊನಾ ವೈರಸ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನಿರ್ದೇಶಿಸಿದರು.