ಜಿಲ್ಲೆ

ಭೂ ಸುಧಾರಣಾ ಕಾಯ್ದೆ ಸುಗ್ರೀವಾಜ್ಞೆಗೆ ವಿರೋಧ

ಶಿವಮೊಗ್ಗ: ನರಗುಂದ-ನವಲಗುಂದ ರೈತ ಹೋರಾಟದ 40ನೇ ವರ್ಷದ ಹುತಾತ್ಮರ ದಿನಾಚರಣೆ ಅಂಗವಾಗಿ ರಾಜ್ಯ ರೈತ ಸಂಘದಿಂದ ಡಿಸಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದ ಮುಖಂಡರು ಭೂ ಸುಧಾರಣಾ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸಿರುವುದನ್ನು ಖಂಡಿಸಿದರು.

ಭೂ ಸುಧಾರಣಾ ಸುಗ್ರೀವಾಜ್ಞೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡಬೇಕು. ವಿದ್ಯುತ್ ಉತ್ಪಾದನೆ, ಪೂರೈಕೆ ವ್ಯವಸ್ಥೆ ಖಾಸಗೀಕರಣ ಮಾಡುವ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು. ಆ ಮೂಲಕ ರೈತರ ಹಿತ ಕಾಯಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

40 ವರ್ಷಗಳಿಂದ ರೈತ ಸಮುದಾಯ ಸಂಘಟಿತವಾಗಿ ನಿರಂತರ ಹೋರಾಟ ಮಾಡುತ್ತಿದೆ. ಸತತವಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ. ಆದರೂ ಯಾವ ಸರ್ಕಾರಗಳೂ ರೈತರ ಹಿತ ಕಾಯುತ್ತಿಲ್ಲ. ರೈತನ ನೈಜ ಸಮಸ್ಯೆಗಳು ಇಂದಿಗೂ ಪರಿಹಾರವಾಗಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ರೈತರ ಬೆಳೆಗೆ ನ್ಯಾಯಯುತ ಬೆಲೆ, ರೈತರ ಸಾಲ ಮನ್ನಾ, ರೈತರಿಗೆ ಅನುಕೂಲವಾಗುವ ಬೆಳೆ ವಿಮೆ, ಅತಿವೃಷ್ಟಿ-ಅನಾವೃಷ್ಟಿಗೆ ಒಳಗಾದ ರೈತರಿಗೆ ಸೂಕ್ತ ಪರಿಹಾರ ಕೊಡುವಂತೆ ಒತ್ತಾಯಿಸಲಾಗುತ್ತಿದೆ. ಆದರೆ ಯಾವ ಸರ್ಕಾರಗಳೂ ನಮ್ಮ ಬೇಡಿಕೆ ಈಡೇರಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಘೊಷಿಸಿರುವ ಬೆಂಬಲ ಬೆಲೆ ಉತ್ಪಾದನಾ ವೆಚ್ಚಕ್ಕಿಂತಲೂ ಕಡಿಮೆಯಿದೆ. ಕೃಷಿ ಉತ್ಪನ್ನಗಳು ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಆಗುತ್ತಿರುವುದರಿಂದ ರೈತ ಆರ್ಥಿಕ ದಿವಾಳಿಗೆ ಗುರಿಯಾಗುತ್ತಿದ್ದಾನೆ ಎಂದು ಆತಂಕ ವ್ಯಕ್ತಪಡಿಸಿದರು.

ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಉಪಾಧ್ಯಕ್ಷ ಹಿಟ್ಟೂರು ರಾಜು, ಟಿ.ಎಂ.ಚಂದ್ರಪ್ಪ, ಜಿಲ್ಲಾ ಗೌರವಾಧ್ಯಕ್ಷ ಈಶಣ್ಣ ಅರಬಿಳಚಿ, ಕಾರ್ಯಾಧ್ಯಕ್ಷ ಪಿ.ಡಿ.ಮಂಜಪ್ಪ, ಡಿ.ಎಚ್.ರಾಮಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಇ.ಬಿ.ಜಗದೀಶ ಇದ್ದರು.