ಮೈಸೂರು: ನಗರದ ಊಟಿ ರಸ್ತೆಯ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಜರುಗಿತು.
ಮೈವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಚ್.ಎಂ.ರಾಜಶೇಖರ್ ಮಾತನಾಡಿ, ಸ್ವಾತಂತ್ರ್ಯ ಭಾರತ ಹಲವು ಕ್ಷೇತ್ರಗಳಲ್ಲಿ ಮಹಾನ್ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಶೇಷ್ಠವಾದದ್ದು. ಇದು ಸ್ವಾತಂತ್ರ್ಯ ಭಾರತದ ಮಹಾನ್ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇದರಿಂದ ಭಾರತ ಸಾಮಾಜಿಕ, ಧಾರ್ಮಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಸಬಲವಾಗಿ ಬೆಳೆಯುತ್ತಿದೆ ಎಂದರು.
ಸ್ವಾತಂತ್ರ್ಯ ಪಡೆಯಲು ಶ್ರಮಿಸಿದ ಇತಿಹಾಸವನ್ನು ನಾವೆಲ್ಲರೂ ಅರಿಯಬೇಕು, ಸ್ಮರಿಸಬೇಕು. ಪ್ರಜಾಪ್ರಭುತ್ವದ ಶಕ್ತಿಯನ್ನು ನಂಬಿ ಅದಮ್ಯ ಚೈತನ್ಯದಿಂದ ದೇಶದ ಸರ್ವತೋಮುಖ ಅಭಿವೃದ್ಧಿಗೆ ನಾವೆಲ್ಲರೂ ಶ್ರಮಿಸಬೇಕು. ಶ್ರೇಷ್ಠವಾದ ಈ ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗದಂತೆ ನಾವೆಲ್ಲರೂ ಪ್ರಜ್ಞಾವಂತ ನಾಗರಿಕರಾಗಿ ನಡೆಯಬೇಕು ಎಂದರು.
ಭ್ರಷ್ಟಾಚಾರ ಮುಕ್ತ ಸಮಾಜವನ್ನು ಕಟ್ಟಬೇಕು. ಭ್ರಷ್ಟಾಚಾರವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ನಮ್ಮ ಇಡೀ ಆರ್ಥಿಕ, ಸಾಮಾಜಿಕ, ಧಾರ್ಮಿಕ ವ್ಯವಸ್ಥೆಯಲ್ಲಿನ ಮೌಲ್ಯ ಕುಸಿಯುವ ಸಾಧ್ಯತೆ ಇರುತ್ತವೆ. ಆದ್ದರಿಂದ ವಿದ್ಯಾವಂತರಾದ ನಾವೆಲ್ಲರು ಅದರ ಬಗ್ಗೆ ಜಾಗೃತರಾಗಿರಬೇಕು ಎಂದು ತಿಳಿಸಿದರು.
ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ.ಸಾಂಬಶಿವಯ್ಯ ಧ್ವಜಾರೋಹಣ ನೆರವೇರಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಎಸ್ ಪ್ರತಿಭಾ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಸೋಮಶೇಖರ, ಡಾ.ಎಲ್. ವಿನಯ್‌ಕುಮಾರ್ ಇದ್ದರು.