ಜಿಲ್ಲೆ

ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ

ಹುಬ್ಬಳ್ಳಿ : ಭ್ರಷ್ಟಾಚಾರದ ಗಂಗೋತ್ರಿಯಾಗಿರುವ ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಆರೋಪಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಮತ್ತೊಂದು ಹೆಸರೇ ಕಾಂಗ್ರೆಸ್. ಕೇಂದ್ರದಲ್ಲಿ 2014ರ ಮೊದಲು ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಾಕಷ್ಟು ಭ್ರಷ್ಟಾಚಾರದ ಹಗರಣಗಳು ನಡೆದಿವೆ ಎಂದು ದೂರಿದರು.

ರಾಜ್ಯ ಸರ್ಕಾರದ ವಿರುದ್ಧ ಶೇ. 40 ಪರ್ಸೆಂಟೇಜ್ ಕಮಿಷನ್ ಆರೋಪ ಮಾಡುತ್ತಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇದುವರೆಗೆ ಸೂಕ್ತ ದಾಖಲೆ, ಸಾಕ್ಷಾಧಾರಗಳನ್ನು ಒದಗಿಸಿಲ್ಲ. ಕಾಂಗ್ರೆಸ್ ಮುಖಂಡರು ಬಿಜೆಪಿ ವಿರುದ್ಧ ಕೇವಲ ಆರೋಪಗಳನ್ನು ಮಾಡುತ್ತಿದ್ದಾರೆಯೇ ಹೊರತು ಸೂಕ್ತ ದಾಖಲೆಗಳನ್ನು ನೀಡಲು ವಿಫಲರಾಗಿದ್ದಾರೆ ಎಂದರು.

ಜಾಮಿನಿನ ಮೇಲೆ ಹೊರಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಹಲವಾರು ಆರೋಪಗಳನ್ನು ಎದುರಿಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಚುನಾವಣೆ ಗಿಮಿಕ್​ಗಾಗಿ ಬಿಜೆಪಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡರು ತುಷ್ಠೀಕರಣವನ್ನೇ ಬಂಡವಾಳವನ್ನಾಗಿಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಸಿದ್ದರಾಮಯ್ಯ ಸಣ್ಣತನದ ಮಾತುಗಳನ್ನು ಆಡುತ್ತಿದ್ದಾರೆ. ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್​ನಂತಹ ಭರವಸೆಗಳನ್ನು ಈಡೇರಿಸದಿದ್ದರೆ ರಾಜಕೀಯ ಸನ್ಯಾಸ ಪಡೆಯುವುದಾಗಿ ಸಿದ್ದರಾಮಯ್ಯ ಹೇಳಿದ್ದು, ಇನ್ನೂ ಮೂರು ತಿಂಗಳ ನಂತರ ಅವರು ರಾಜಕೀಯ ಸನ್ಯಾಸತ್ವ ಪಡೆಯುವುದು ಖಚಿತ ಎಂದು ಭವಿಷ್ಯ ನುಡಿದರು.