ಮಳವಳ್ಳಿ ಹೊರವಲಯದಲ್ಲಿರುವ ಆದರ್ಶ ವಿದ್ಯಾಲಯ ಶಾಲೆ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷೆ ಚಲುವಮ್ಮ ಉದ್ಘಾಟಿಸಿದರು. ಬಿಇಒ ಉಮಾ, ತಾಪಂ ಇಒ ಎಚ್.ಜಿ. ಶ್ರೀನಿವಾಸ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಿ.ಮಹದೇವು, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ, ಮುಖ್ಯ ಶಿಕ್ಷಕ ಜಿ.ಶಿವರಾಜು ಇತರರು ಇದ್ದರು. 
ಜಿಲ್ಲೆ

ಮಕ್ಕಳ ಕೌಶಲ ಉತ್ತೇಜಿಸಲು ಮುಂದಾಗಿ

ಮಳವಳ್ಳಿ: ಪಠ್ಯಕ್ರಮ ಕಲಿಕೆಯೊಂದಿಗೆ ಮಕ್ಕಳಲ್ಲಿರುವ ಕಲೆ ಮತ್ತು ಕೌಶಲಗಳನ್ನು ಗುರುತಿಸಿ ಅವರ ಪ್ರತಿಭೆಗೆ ಉತ್ತೇಜನ ನೀಡಲು ಇಲಾಖೆ ಹಲವು ಯೋಜನೆಗಳನ್ನು ರೂಪಿಸಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಹೇಳಿದರು.

ಪಟ್ಟಣದ ಹೊರವಲಯದಲ್ಲಿ ಆದರ್ಶ ವಿದ್ಯಾಲಯ ಶಾಲಾ ಆವರಣದಲ್ಲಿ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಸಹಯೋಗದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳ ಕ್ರಿಯಾಶೀಲ ಚಟುವಟಿಕೆಗೆ ಉತ್ತಮ ವೇದಿಕೆ ಕಲ್ಪಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ರೂಪಿಸಲಾಗಿದೆ. ಮಕ್ಕಳು ಇದನ್ನು ಸದ್ಬಳಕೆ ಮಾಡಿಕೊಂಡು ತಮ್ಮಲ್ಲಿನ ವಿಶೇಷ ಪ್ರತಿಭೆಗಳನ್ನು ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.

ಹಿರಿಯರಿಗೆ ಜವಾಬ್ದಾರಿ ಇದೆ: ಮಕ್ಕಳ ಶಕ್ತಿ ಗುರುತಿಸಿ ಅವರನ್ನು ಉತ್ತಮ ಪ್ರಜೆಗಳನ್ನಾಗಿಸುವತ್ತ ಹುರಿದುಂಬಿಸುವ ಹೊಣೆಗಾರಿಕೆ ಶಿಕ್ಷಕರ ಮತ್ತು ಹಿರಿಯರ ಮೇಲಿದೆ. ಇಲ್ಲಿನ ಸ್ಪರ್ಧೆಯಲ್ಲಿ ತೀರ್ಪುಗಾರರು ಪಾರದರ್ಶಕ ತೀರ್ಮಾನ ನೀಡಲಿದ್ದು, ನಮ್ಮ ತಾಲೂಕಿನ ಪ್ರತಿಭೆಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬೆಳಗುವಂತೆ ಆಗಲಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಆಶಿಸಿದರು.

ಮಾರೇಹಳ್ಳಿ ಗ್ರಾಪಂ ಅಧ್ಯಕ್ಷೆ ಚಲುವಮ್ಮ ಕಾರ್ಯಕ್ರಮ ಉದ್ಘಾಟಿಸಿದರು. ತಾಪಂ ಇಒ ಎಚ್.ಜಿ. ಶ್ರೀನಿವಾಸ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಿ.ಮಹದೇವು, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ, ಆದರ್ಶ ವಿದ್ಯಾಲಯ ಮುಖ್ಯ ಶಿಕ್ಷಕ ಜಿ.ಶಿವರಾಜು, ಎಸ್‌ಡಿಎಂಸಿ ಅಧ್ಯಕ್ಷ ಟಿ.ಎಂ. ಪ್ರಕಾಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗುರುಸ್ವಾಮಿ ಇತರರು ಇದ್ದರು.