ಚಾಮರಾಜನಗರ: ಮಾನವ ಕಳ್ಳಸಾಗಾಣೆ ತಡೆಯುವುದು ಹಾಗೂ ಮಕ್ಕಳ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಈಶ್ವರ್ ಹೇಳಿದರು.
ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕಾರ್ಮಿಕ ಇಲಾಖೆ, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ರಾಜ್ಯ ಶಾಸ್ತ್ರ ವಿಭಾಗ, ಮಹಿಳಾ ದೌರ್ಜನ್ಯ ತಡೆ ಸಮಿತಿ ಹಾಗೂ ಮೈಸೂರಿನ ಮಡಿಲು ಶಿಕ್ಷಣ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಮಾನವ ಕಳ್ಳ ಸಾಗಣಿಕೆ ತಡೆ ದಿನಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಾನವ ಕಳ್ಳಸಾಗಾಣೆ ತಡೆಗಟ್ಟುವುದು ಪ್ರತಿಯೊಬ್ಬರ ಜವಬ್ದಾರಿಯಾಗಿದೆ. ಪ್ರಸ್ತುತ ಸಂದರ್ಭದಲ್ಲಿ ಯಾರು ಕೂಡ ಅಪರಿಚಿತ ವ್ಯಕ್ತಿಗಳು ತೆ ಸಂಪರ್ಕ ಇಟ್ಟುಕೊಳ್ಳಬಾರದು. ಅಪರಿಚಿತ ಸಂಖ್ಯೆಗಳಿಂದ ಮೊಬೈಲ್ ಗಳಿಗೆ ಲಿಂಕಲ್ ಬಂದರೆ ಅದನ್ನು ಸ್ವೀಕರಿಸಬಾರದು. ಈ ಮೂಲಕ ಮಾನವ ಕಳ್ಳಸಾಗಾಣೆಯನ್ನು ತಡೆಗಟ್ಟಬಹುದಾಗಿದೆ ಎಂದರು.
ಚಾಮರಾಜನಗರ ಜಿಲ್ಲೆಯನ್ನು ನ.14 ರ ಒಳಗೆ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ೋಷಣೆ ಮಾಡಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಸಂಘ-ಸಂಸ್ಥೆಗಳು ಸಹಕಾರವನ್ನು ನೀಡಬೇಕು.ವಿದ್ಯಾರ್ಥಿಗಳು ಉತ್ತಮ ಜ್ಞಾನ ಸಂಪಾದಿಸುವ ಕಡೆಗೆ ಗಮನಹರಿಸಬೇಕಿದೆ ಎಂದು ಸಲಹೆ ನೀಡಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಸಿ.ರಾಮಚಂದ್ರಯ್ಯ ಮಾತನಾಡಿ, ಬಾಲ ಕಾರ್ಮಿಕರನ್ನು ಕೆಲಸಕ್ಕೆ ಸೇರಿಸಿಕೊಳ್ಳಬಾರದು. ಅಪ್ರಾಪ್ತ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಕಾರ್ಮಿಕ ಇಲಾಖೆ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಇದನ್ನು ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ನಂಜಯ್ಯ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಕಾನೂನು ಅರಿವು ಅತ್ಯಗತ್ಯ. ಮಕ್ಕಳ ಕಳ್ಳ ಸಾಗಣೆ ತಡೆಯಲು ಪ್ರತಿಯೊಬ್ಬ ನಾಗರೀಕರ ಕರ್ತವ್ಯ ಎಂದು ಹೇಳಿದರು. ಈ ವೇಳೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಅಧ್ಯಕ್ಷ ಜಿ.ಬಂಗಾರು, ಜಿಲ್ಲಾ ಕಾರ್ಮಿಕ ಇಲಾಖೆ ಯೋಜನೆ ಅಧಿಕಾರಿ ಮಹೇಶ್, ಬಾಲ ನ್ಯಾಯ ಮಂಡಳಿ ಸದಸ್ಯ ಗಂಗಾಧರಸ್ವಾಮಿ, ಮೈಸೂರಿನ ಮಡಿಲು ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ನಿರ್ದೇಶಕ ಕೆ.ಶ್ರೀನಿವಾಸ್, ಕಾಲೇಜಿನ ರಾಜ್ಯಶಾಸ್ತ್ರ ಮುಖ್ಯಸ್ಥ ಶೈಲೇಶ್ ಕುಮಾರ್, ಉಪನ್ಯಾಸಕ ಡಾ.ಶಾಂತರಾಜು, ಮಂಜುನಾಥ್, ನಾಗೇಂದ್ರ, ಚೇತನ್ ಹಾಗೂ ಇತರರು ಹಾಜರಿದ್ದರು.