???????????????????????????????????? 
ಜಿಲ್ಲೆ

ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಮಾದಕ ವ್ಯಸನಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು. ಮಾದಕ ವಸ್ತುಗಳಿಂದ ಮಕ್ಕಳು ದೂರವಿರಲು ತಂದೆ, ತಾಯಿ ಮತ್ತು ಶಾಲಾ, ಕಾಲೇಜುಗಳ ಪಾತ್ರ ಬಹು ಮುಖ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ. ಶಾಂತಿ ಹೇಳಿದರು.
ನಗರದ ಆಲೂರು ವೆಂಕಟರಾವ್ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಪೊಲೀಸ ಇಲಾಖೆ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ ಮಾದಕ ವಸ್ತುಗಳಿಂದ ಮಕ್ಕಳನ್ನು ಹಾಗೂ ಯುವ ಜನಾಂಗ ರಕ್ಷಿಸಲು, ನಮ್ಮ ಮಕ್ಕಳ ರಕ್ಷಣೆ ನಮ್ಮ ಜವಾಬ್ದಾರಿ ವಿಶೇಷ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾದಕ ವಸ್ತುಗಳಿಂದ ಯುವ ಜನಾಂಗವನ್ನು ರಕ್ಷಿಸಿ, ಅವರ ಭವಿಷ್ಯ ಉಜ್ವಲಗೊಳಿಸಬೇಕು. ಮಕ್ಕಳನ್ನು ಡ್ರಗ್ಸ್, ಗಾಂಜಾ ಮತ್ತು ಅಫೀಮ್‌ನಂತಹ ಮಾದಕ ವಸ್ತುಗಳಿಂದ ದೂರವಿಡಿ. ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.
ಹು-ಧಾ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಮಾತನಾಡಿ, ಮಕ್ಕಳು ದುಶ್ಚಟಕ್ಕೆ ಬಲಿಯಾಗದಂತೆ ಅವರಲ್ಲಿ ಜಾಗೃತಿ ಮೂಡಿಸಬೇಕು. ಮಾದಕ ವಸ್ತುಗಳನ್ನು ನಿರ್ಮೂಲನೆ ಮಾಡುವುದರಿಂದ ಸಮಾಜದಲ್ಲಿ ಶಾಂತಿ ಹೆಚ್ಚುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಮಕ್ಕಳ ಆರೋಗ್ಯದ ಜತೆಗೆ ಅವರ ಭವಿಷ್ಯ ಹಾಳಾಗದಂತೆ ನೋಡಿಕೊಳ್ಳಬೇಕು. ಮಾದಕ ವಸ್ತುಗಳ ಸೇವನೆಯಿಂದ ಅಪರಾಧಗಳು ಹೆಚ್ಚುತ್ತಿದ್ದು, ಇದರ ವಿರುದ್ಧ ನಾವೆಲ್ಲರೂ ಹೋರಾಡಬೇಕು. ಮನೆಯಲ್ಲೆ ಮಕ್ಕಳನ್ನು ತಿದ್ದಬೇಕು. ಡ್ರಗ್ಸ್, ಗಾಂಜಾದಂತಹ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಮಾಡುತ್ತಿರುವವರ ಸುಳಿವು ನೀಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.
ಕರ್ನಾಟಕ ವಕೀಲರ ಪರಿಷತ್‌ನ ಮಾಜಿ ಅಧ್ಯಕ್ಷ ಎ.ಎ.ಮಗದುಮ್, ಕರ್ನಾಟಕ ವಕೀಲರ ಪರಿಷತ್ ಸದಸ್ಯ ವಿ.ಡಿ. ಕಾಮರೆಡ್ಡಿ, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಪರಶುರಾಮ ದೊಡ್ಡಮನಿ ಸ್ವಾಗತಿಸಿದರು. ಸೋಮಶೇಖರ ಜಾಡರ ನಿರೂಪಿಸಿದರು. ಎನ್.ಆರ್. ಮಟ್ಟಿ ವಂದಿಸಿದರು.