ಜಿಲ್ಲೆ

ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಬಳಸಿಕೊಳ್ಳದಂತೆ ಸೂಚನೆ

ಚಾಮರಾಜನಗರ: ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದ್ದು, ಪಟಾಕಿ ತಯಾರಿಕೆ, ಮಾರಾಟ ಹಾಗೂ ಇತರೆ ಅಪಾಯಕಾರಿ ಉದ್ದಿಮೆಗಳಲ್ಲಿ ಹಾಗೂ ಅಂಗಡಿಗಳಲ್ಲಿ 18 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದಂತೆ ಕಾರ್ಮಿಕ ಇಲಾಖೆ ತಿಳಿಸಿದೆ.

ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಕಾಯ್ದೆ 1986 ತಿದ್ದುಪಡಿ 2016ರನ್ನು ಸರ್ಕಾರ ಜಾರಿಗೊಳಿಸಿದೆ. ಕಾಯ್ದೆಯನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಅಲ್ಲದೇ 14 ರಿಂದ 18ರ ವಯಸ್ಸಿನ ಕಿಶೋರ ಕಾರ್ಮಿಕ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗಿದೆ. ತಪ್ಪಿದಲ್ಲಿ ಪಟಾಕಿ ಅಂಗಡಿ, ಉದ್ದಿಮೆಗಳ ಮಾಲೀಕರ ವಿರುದ್ದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇದ ಮತ್ತು ನಿಯಂತ್ರಣ) ಕಾಯ್ದೆಅನ್ವಯ ಕಾನೂನು ಕ್ರಮ ಜರಿಗಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸದಸ್ಯ ಕಾರ್ಯದರ್ಶಿಗಳಾದ ಟಿ.ಸಿ. ರಾಮಚಂದ್ರಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.