ಜಿಲ್ಲೆ

ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ಪ್ರದರ್ಶನ ನಾಳಿದ್ದು

ಹಾಸನ: ಮಕ್ಕಳ ದಿನಾಚರಣೆ ಅಂಗವಾಗಿ ನ.19 ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ನಗರದ ವಾಣಿವಿಲಾಸ ಶಾಲಾ ಆವರಣದಲ್ಲಿರುವ ಗುರುಭವನದಲ್ಲಿ ಮಕ್ಕಳಿಗೆ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಮತ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ವೈ.ಬಿ. ರವಿ ತಿಳಿಸಿದರು.
ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನ ಜತೆಗೆ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರಶಂಸಾ ಪತ್ರ ನೀಡಲಾಗುವುದು. ಆಕಾಂಕ್ಷಿಗಳು 20 ರೂ. ನೀಡಿ ಸ್ಥಳದಲ್ಲೇ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಇದರೊಂದಿಗೆ ಶಾಲಾ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಯೋಗದಲ್ಲಿ ನ.19 ಭಾನುವಾರ 10 ಗಂಟೆಗೆ ಜಿಲ್ಲಾ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಪಿ. ಸ್ವರೂಪ್, ಜಿಲ್ಲಾಧಿಕಾರಿ ಸಿ. ಸತ್ಯಭಾಮಾ, ಡಯಟ್ ಉಪನಿರ್ದೇಶಕಿ ಪುಷ್ಪಲತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ಸಿ.ಕೆ. ಹರೀಶ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಳ್ಳುಗೋಪಾಲ್, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್. ಮಂಜುಳಾ, ಕಸಾಪ ಮಾಜಿ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಪ್ರಾಂಶುಪಾಲ ಆರ್.ಸಿ. ಕಾರದಕಟ್ಟಿ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು.
ನ. 20ರ ಸೋಮವಾರ 4 ಗಂಟೆಗೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಲಿದ್ದು, ಮಾಜಿ ಶಾಸಕ ಪ್ರೀತಂ ಜೆ. ಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಟಿ. ಜವರೇಗೌಡ, ಡಯಟ್ ಪ್ರಾಂಶುಪಾಲ ಕೆ.ಎಸ್. ಪ್ರಕಾಶ್, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಈ. ಕೃಷ್ಣೇಗೌಡ, ಸಂಜೀವಿನಿ ಸಹಕಾರಿ ಆಸ್ಪತ್ರೆಯ ಮಾಜಿ ಅಧ್ಯಕ್ಷ ಗಿರೀಗೌಡ, ಬಸವರಾಜು, ಅಣ್ಣಪ್ಪ, ರಮೇಶ್ ಇತರರು ಪಾಲ್ಗೊಳ್ಳುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಎಚ್.ಎಂ. ರಮೇಶ್, ಖಜಾಂಚಿ ಪಿ.ಎನ್.ಲಿಂಗರಾಜು, ನಿರ್ದೇಶಕ ಡಿ.ಎಸ್. ಚಂದ್ರಶೇಖರ್, ರವಿಕಾಂತ್ ಇತರರು ಇದ್ದರು.