ಸಿರವಾರ: ವಿಧಾನಸಭೆ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಪಂ ನರೇಗಾ ಸಹಾಯಕ ನಿರ್ದೇಶಕಿ ಶರ್ಫುನ್ನಿಸಾ ಬೇಗಂ ಮನವಿ ಮಾಡಿದರು.
ಗಣದಿನ್ನಿ ಗ್ರಾಪಂ ವ್ಯಾಪ್ತಿಯ ಸಿಂಗಡದಿನ್ನಿ, ಬೇವಿನೂರು ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕಾಲುವೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಸೋಮವಾರ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ತಾಲೂಕಿನಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಸಹಕಾರ ನೀಡಬೇಕು. ಸ್ವೀಪ್ ಚಟುವಟಿಕೆಯಡಿ ಮತದಾನ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಈ ಬಾರಿ ಚುನಾವಣಾ ಆಯೋಗವು ಅಂಗವಿಕಲರು ಹಾಗೂ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತ ಚಲಾಯಿಸುವ ಅವಕಾಶ ಕಲ್ಪಿಸಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.