ಔರಾದ್: ಸದೃಢ ರಾಷ್ಟ್ರ ನಿರ್ಮಾಣಕ್ಕೆ ದೇಶದ ಪ್ರತಿಯೊಬ್ಬರೂ ಮತ ಚಲಾಯಿಸಬೇಕು ಎಂದು ಸಿವಿಲ್ ನ್ಯಾಯಾಧೀಶ ಅಭಿನಯ ಹೇಳಿದರು.
ಪಟ್ಟಣದ ಡಿಪ್ಲೊಮಾ ಕಾಲೇಜಿನಲ್ಲಿ ಶನಿವಾರ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಆಡಳಿತ ಹಾಗೂ ನ್ಯಾಯವಾದಿಗಳ ಸಂಘದಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ಪ್ರಜೆಯೂ ಮತದಾನದ ಮಹತ್ವ ಅರಿತು ಮತದಾನ ಮಾಡುವುದು ಶ್ರೇಷ್ಠ ಕಾರ್ಯವಾಗಿದ್ದು, ಪ್ರತಿಯೊಬ್ಬರೂ ಮತದಾನ ಮಾಡುವುದರ ಜತೆಗೆ ಎಲ್ಲರಿಗೂ ಜಾಗೃತಿ ಮೂಡಿಸಬೇಕು ಎಂದರು.
ವಿಶ್ವದ ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟç ನಮ್ಮದಾಗಿದೆ. ೧೮ ವರ್ಷ ತುಂಬಿದವರು ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕು ಪಡೆಯಲು ಹೆಸರು ನೋಂದಣಿ ಮಾಡಿಕೊಳ್ಳಬೇಕು ಎಂದು ಹೇಳಿದರು.
ತಹಸೀಲ್ದಾರ್ ಮಲ್ಲಶೆಟ್ಟಿ ಚಿದ್ರೆ, ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಮಾತನಾಡಿ, ರಾಷ್ಟçದ ಪ್ರಗತಿಗೆ ಯುವಕರು ಗುರುತಿನ ಚೀಟಿ ಪಡೆದು ಯಾವುದೇ ಆಸೆಗೆ ಒಳಗಾಗದೇ ತಪ್ಪದೇ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ತಿಳಿಸಿದರು.
ನ್ಯಾಯವಾದಿ ಸಂಘದ ಅಧ್ಯಕ್ಷ ಸಂದೀಪ ಮೇತ್ರೆ ಮಾತನಾಡಿದರು. ನ್ಯಾಯವಾದಿ ರಾಜಕುಮಾರ ಮೀತ್ರಾ ವಿಶೇಷ ಉಪನ್ಯಾಸ ನೀಡಿದರು. ಪ್ರಾಂಶುಪಾಲ ವಿಜಯಶೆಟ್ಟಿ ಇತರರಿದ್ದರು.