ಚಾಮರಾಜನಗರ: ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾಗಿರುವ ಮೇಜರ್ ಪಿ. ಮಣಿವಣ್ಣನ್ ಅವರು ಜಿಲ್ಲೆಗೆ ಭೇಟಿ ನೀಡಿ ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಕಾರ್ಯಗಳ ಪರಿಶೀಲನೆ ನಡೆಸಿದರು.
ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ಪರಿಶೀಲನೆ ನಡೆಸಿ ಸಭೆ ನಡೆಸಿದರು. ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತಂತೆ ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ವಿಲೇವಾರಿ ಸಂಬಂಧ ಪರಿಶೀಲಿಸಿದರು.
ಜಿಲ್ಲೆಯ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಹನೂರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ನಮೂನೆ 6, 7 ಮತ್ತು 8ರ ಅರ್ಜಿಗಳನ್ನು ಪರಿಶೀಲಿಸಿದರು. ಸಂಬಂಧಪಟ್ಟ ಆಯಾ ಕ್ಷೇತ್ರದ ಚುನಾವಣಾ ಅಧಿಕಾರಿಗಳು ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಗಳ ಸಂಬಂಧ ವಿವರ ಪಡೆದುಕೊಂಡರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಬಿ.ಆರ್. ಮಹೇಶ್, ತಹಶೀಲ್ದಾರರಾದ ಬಸವರಾಜು, ಜಯಪ್ರಕಾಶ್, ಗುರುಪ್ರಸಾದ್, ಗಿರಿಜಾ, ರಮೇಶ್ ಬಾಬು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಉಮೇಶ್, ಶ್ರೀನಿವಾಸ್, ಷಣ್ಮುಗಂ, ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.