ಮಂಡ್ಯ: ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಗುರುತಿನ ಚೀಟಿ ಹೊಂದಿದ್ದರೂ ಸಾರ್ವಜನಿಕರು ತಪ್ಪದೆ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಅಂತಿಮ ಮತದಾರರ ಪಟ್ಟಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಮುಖ್ಯ ಚುನಾವಣಾಧಿಕಾರಿ ಅವರ ನೇತೃತ್ವದಲ್ಲಿ ಕರ್ನಾಟಕದ ಎಲ್ಲ ಜಿಲ್ಲಾಧಿಕಾರಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮತದಾರರ ಪಟ್ಟಿ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆದಿದೆ. ಅದರಂತೆ ಜಿಲ್ಲೆಯ ಪ್ರಗತಿಯನ್ನು ತಿಳಿಸಿದ್ದೇವೆ ಎಂದರು.
18 ವರ್ಷ ತುಂಬಿದವರು ಮತದಾರರ ಪಟ್ಟಿಗೆ ಸೇರ್ಪಡೆ ಕೋರಿ ಅರ್ಜಿ ಸಲ್ಲಿಸಿದವರು, ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿರುವವರು ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಬೇಕು. ಪಟ್ಟಿಯಿಂದ ಕೈ ಬಿಡುವಂತೆ ಬಂದಿದ್ದ ಅರ್ಜಿ ಪರಿಶೀಲಿಸಲಾಗಿದೆ. ಸ್ಥಳ ಮಹಜರು ಮಾಡಿ ನಂತರ ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದೇವೆ. ಕಳೆದೊಂದು ವರ್ಷದಲ್ಲಿ ಜಿಲ್ಲೆಯಲ್ಲಿ 60 ಸಾವಿರಕ್ಕೂ ಹೆಚ್ಚಿನ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಅಧಿಕಾರಿಗಳು ಯಾವುದೇ ಹೆಸರನ್ನು ಸ್ವಯಂ ಪ್ರೇರಿತವಾಗಿ ಕೈಬಿಟ್ಟಿಲ್ಲ. ಒಂದು ವೇಳೆ ಮತದಾರರು ತಾವು ವಾಸವಿರುವ ಸ್ಥಳದಲ್ಲಿ ಅರ್ಜಿ ಸಲ್ಲಿಸದೆ ಮತದಾರರ ಪಟ್ಟಿಯಿಂದ ಕೈಬಿಟ್ಟ ಪ್ರಕರಣಗಳು ಇದ್ದಲ್ಲಿ ಅಂತಹವರು ನೇರವಾಗಿ ತಹಸೀಲ್ದಾರ್ ಗಮನಕ್ಕೆ ತರಬೇಕು. ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಮಂಡ್ಯ ಉಪವಿಭಾಗಾಧಿಕಾರಿ ಎಚ್.ಎಸ್.ಕೀರ್ತನಾ, ಪಾಂಡವಪುರ ಉಪವಿಭಾಗಾಧಿಕಾರಿ ಮೊಹಮ್ಮದ್, ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಸ್ವಾಮಿಗೌಡ ಇತರರಿದ್ದರು.