ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಪೊಲೀಸ್ ನಗರ ಆಯುಕ್ತ ಡಾ.ಕೆ. ತ್ಯಾಗರಾಜನ್, ಡಾ.ವಿನಯ ದಾಸ್ತಿಕೊಪ್ಪ ಮತ್ತಿತರರು ಉಪಸ್ಥಿತರಿದ್ದರು. 
ಜಿಲ್ಲೆ

ಮನೆ ಮನೆಗೆ ತೆರಳಿ ತಪಾಸಣೆ ನಡೆಸಿ

ಬೆಳಗಾವಿ: ಗ್ರಾಮೀಣ ಪ್ರದೇಶದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಹಳ್ಳಿಗಳಲ್ಲಿ ಕಡ್ಡಾಯವಾಗಿ ಮನೆ ಮನೆಗೆ ತೆರಳಿ ರ‌್ಯಾಪಿಡ್ ಆಂಟಿಜನ್ ಟೆಸ್ಟ್ ಮಾಡುವ ಮೂಲಕ ಸೋಂಕಿತರನ್ನು ಕೂಡಲೇ ಪತ್ತೆ ಮಾಡಿ, ಸೂಕ್ತ ಚಿಕಿತ್ಸೆ ನೀಡಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ ಸೂಚನೆ ನೀಡಿದರು.

ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಜಿಲ್ಲೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರ‌್ಯಾಟ್ (ರ‌್ಯಾಪಿಡ್ ಆ್ಯಂಟಿಜನ್ ಟೆಸ್ಟ್) ಕಿಟ್ ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಿದ್ದು, ಅವುಗಳನ್ನು ಬಳಸಿಕೊಳ್ಳಬೇಕು. ಒಟ್ಟು ಜನಸಂಖ್ಯೆಯ ಶೇ.30 ರ‌್ಯಾಟ್ ಮಾಡಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಆದಾಗ್ಯೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರ‌್ಯಾಟ್ ಪರೀಕ್ಷೆ ಪ್ರಮಾಣ ಕಡಿಮೆಯಿದೆ. ರ‌್ಯಾಟ್ ವಿಧಾನ ಮೂಲಕ ಕೋವಿಡ್ ತಪಾಸಣೆ ಹೆಚ್ಚಿಸದ ಹೊರತು ಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿತರನ್ನು ಪತ್ತೆ ಮಾಡುವುದು ಕಷ್ಟ. ಒಂದು ವೇಳೆ ಲಕ್ಷಣಗಳಿದ್ದೂ ರ‌್ಯಾಟ್‌ನಲ್ಲಿ ನೆಗೆಟಿವ್ ಬಂದಾಗ ಮಾತ್ರ ಆರ್‌ಟಿಪಿಸಿಆರ್, ಮತ್ತಿತರ ಪರೀಕ್ಷೆ ಮಾಡಬೇಕು ಎಂದರು.

ಸ್ವಾೃಬ್ ಸಂಗ್ರಹಿಸುವ ಸಂದರ್ಭದಲ್ಲಿ ಸರಿಯಾದ ವಿಳಾಸ ಪಡೆದುಕೊಳ್ಳಬೇಕು. ಸೋಂಕಿತರ ಪರ್ಯಾಯ ದೂರವಾಣಿ ಸಂಖ್ಯೆ ಪಡೆಯಬೇಕು. ಸೋಂಕು ದೃಢಪಟ್ಟ ತಕ್ಷಣವೇ ಅಗತ್ಯ ಔಷಧ ಕಿಟ್ ನೀಡಬೇಕು. ಹೋಮ್ ಐಸೋಲೇಷನ್‌ನಲ್ಲಿ ಇರುವವರ ಮೇಲೆ ವಾರ್ ರೂಮ್ ಮೂಲಕ ನಿರಂತರ ನಿಗಾ ವಹಿಸಬೇಕು ಎಂದರು.

ನಗರ ಪೊಲೀಸ್ ಆಯುಕ್ತ ಡಾ. ಕೆ.ತ್ಯಾಗರಾಜನ್, ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ, ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ವಿ. ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ನೋಡಲ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾಡಳಿತದಿಂದಲೇ ಬೆಡ್ ಹಂಚಿಕೆ ಮಾಡಿ

ಸೋಂಕಿನ ಪ್ರಮಾಣ ಇನ್ನಷ್ಟು ಹೆಚ್ಚಾದರೆ ಬೆಡ್ ಬೇಡಿಕೆ ಹೆಚ್ಚಾಗಲಿದೆ. ಆದ್ದರಿಂದ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸರ್ಕಾರಿ ಕೋಟಾದ ಬೆಡ್‌ಗಳನ್ನು ಜಿಲ್ಲಾಡಳಿತದಿಂದಲೇ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕು. ಬೆಂಗಳೂರು, ಮೈಸೂರು, ಧಾರವಾಡ ಸೇರಿ ಅನೇಕ ಜಿಲ್ಲೆಗಳಲ್ಲಿ ಜಿಲ್ಲಾಡಳಿತದ ಮೂಲಕವೇ ಬೆಡ್ ಹಂಚಿಕೆ ಮಾಡಲಾಗುತ್ತಿದೆ. ಈ ಮಾದರಿ ಅನುಸರಿಸುವುದು ಉತ್ತಮ ಎಂದು ರವಿಕುಮಾರ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಪರೀಕ್ಷೆಗೆ ಸ್ವಾೃಬ್ ಸಂಗ್ರಹಿಸಿದ ಬಳಿಕ ವರದಿ ನೀಡಲು ಮೂರು ದಿನಗಳಾಗುತ್ತಿತ್ತು. ಇದೀಗ ತಾಲೂಕುವಾರು ಡೇಟಾ ಎಂಟ್ರಿ ಸಿಬ್ಬಂದಿ ಒದಗಿಸಿದ್ದರಿಂದ ಒಂದು ದಿನ ವಿಳಂಬ ತಪ್ಪಿಸಲಾಗಿದೆ ಎಂದು ವಿವರಿಸಿದರು.

ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಲು ಸಲಹೆ

ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಟೆಸ್ಟಿಂಗ್ ಪ್ರಮಾಣ ಇನ್ನಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಸೋಂಕಿತರಿಗೆ ಹತ್ತು ದಿನ ಆಸ್ಪತ್ರೆಯಲ್ಲಿ ನಿಗದಿತ ಚಿಕಿತ್ಸೆ ನೀಡಿದ ಬಳಿಕ ಕೊನೆಯ ಮೂರು ದಿನಗಳ ಕಾಲ ಅವರಲ್ಲಿ ಜ್ವರ ಕಂಡು ಬರದಿದ್ದರೆ ಅಂತಹವರನ್ನು ಡಿಸ್ಚಾರ್ಜ್ ಮಾಡಬೇಕು. ಹೋಮ್ ಐಸೋಲೇಷನ್‌ಗೆ ಆದ್ಯತೆ ನೀಡದೆ ಸ್ಥಳೀಯ ಮಟ್ಟದ ಟಾಸ್ಕ್‌ಫೋರ್ಸ್ ಚುರುಕುಗೊಳಿಸಿ, ಸ್ಥಳೀಯ ಕೋವಿಡ್ ಕೇರ್ ಕೇಂದ್ರಗಳಿಗೆ ಸೋಂಕಿತರನ್ನು ದಾಖಲಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ತಾಲೂಕುಗಳಲ್ಲಿ ಕಡ್ಡಾಯವಾಗಿ ಕೋವಿಡ್ ಕೇರ್ ಕೇಂದ್ರ ಆರಂಭಿಸಬೇಕು. ಪೊಲೀಸ್ ಸಿಬ್ಬಂದಿಗೆ ಪ್ರತ್ಯೇಕ ಕಾಳಜಿ ಕೇಂದ್ರ ಆರಂಭಿಸಬೇಕು. ವೈದ್ಯರು ಸೇರಿ ಯಾವುದೇ ರೀತಿಯ ವೈದ್ಯಕೀಯ ಸಿಬ್ಬಂದಿ ಅಗತ್ಯವಿದ್ದರೆ ತಕ್ಷಣ ನೇಮಕಾತಿ ಮಾಡಿಕೊಳ್ಳಿ. ಒಂದು ವೇಳೆ ತಜ್ಞ ವೈದ್ಯರು ಲಭ್ಯವಿಲ್ಲದಿದ್ದರೆ ಹೆಚ್ಚಿನ ಸಂಭಾವನೆ ನೀಡಿ ನೇಮಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ರವಿಕುಮಾರ ಸೂಚನೆ ನೀಡಿದರು.