ಜಿಲ್ಲೆ

ಮಲ ತ್ಯಾಜ್ಯ ವೈಜ್ಞಾನಿಕವಾಗಿ ನಿರ್ವಹಣೆಯಾಗಲಿ

 ಪಾಂಡವಪುರ: ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಪಂ ವ್ಯಾಪ್ತಿಯ ಚಾಗಶೆಟ್ಟಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಮಲ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಮಂಗಳವಾರ ಪರಿಶೀಲನೆ ನಡೆಸಿದರು.

ಸ್ಥಳಕ್ಕೆ ಭೇಟಿ ನೀಡಿ ಘಟಕ ನಿರ್ಮಾಣ ಕಾಮಗಾರಿಯ ಬಗ್ಗೆ ಗ್ರಾಪಂ ಪಿಡಿಒ ಮತ್ತು ಕೆಆರ್‌ಐಡಿಎಲ್ ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಅವರು ಮಾತನಾಡಿ, ತ್ಯಾಜ್ಯ ನಿರ್ವಹಣಾ ಘಟಕವನ್ನು ಶೀಘ್ರ ಹಸ್ತಾಂತರ ಪಡೆದು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಗ್ರಾಪಂ ಪಿಡಿಒಗೆ ಸೂಚನೆ ನೀಡಿದರು. ಶೌಚಗೃಹಗಳ ಗುಂಡಿಗಳು ತುಂಬಿಕೊಂಡ ನಂತರ ಯಾಂತ್ರಿಕೃತ ವಿಧಾನದ ಮೂಲಕ ಅದನ್ನು ತೆರವುಗೊಳಿಸಿ ಎಲ್ಲೆಂದರಲ್ಲಿ ವಿಲೇವಾರಿ ಮಾಡಲಾಗುತ್ತಿದ್ದು, ಇದು ಬಯಲು ಶೌಚಕ್ಕಿಂತ ಅಪಾಯಕಾರಿಯಾದ ಕ್ರಮವಾಗಿದೆ. ಮಲ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪಾಂಡವಪುರ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿರುವ ಸಕ್ಕಿಂಗ್ ಯಂತ್ರವನ್ನು ಗ್ರಾಪಂ ಮಟ್ಟದ ಒಕ್ಕೂಟಕ್ಕೆ ಹಸ್ತಾಂತರ ಮಾಡಿ ಉದ್ಯಮದ ಮಾದರಿಯಲ್ಲಿ ನಿರ್ವಹಣೆ ಮಾಡಲು ಕ್ರಮವಹಿಸುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಅವರಿಗೆ ಇದೇ ವೇಳೆ ಸೂಚನೆ ನೀಡಿದರು.

ಇದೇ ವೇಳೆ ಮಲ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಕೆಆರ್‌ಐಡಿಎಲ್ ಸಂಸ್ಥೆ ನಿರ್ವಹಿಸುತ್ತಿದ್ದು, ಎರಡು ಘಟಕಗಳನ್ನು ಈಗಾಗಲೇ ಪೂರ್ಣಗೊಳಿಸಿದೆ. ಉಳಿದ ಎರಡು ಘಟಕಗಳ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರ ಪೂರ್ಣಗೊಳಿಸುವುದಾಗಿ ಕೆಆರ್‌ಐಡಿಎಲ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೋಮಶೇಖರ್ ಸಿಇಒ ಅವರಿಗೆ ಮಾಹಿತಿ ನೀಡಿದರು.

ಜಿಪಂ ಉಪಕಾರ್ಯದರ್ಶಿ ಲಕ್ಷ್ಮೀ, ತಾಪಂ ಇಒ ವೀಣಾ, ಕೆ.ಆರ್.ಪೇಟೆ ತಾಪಂ ಇಒ ಸುಷ್ಮಾ ಇತರರು ಇದ್ದರು.