ಜಿಲ್ಲೆ

ಮಲೇರಿಯಾ ತಡೆಗೆ ಸೊಳ್ಳೆಗಳನ್ನು ನಿಯಂತ್ರಿಸಿ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಮಲೇರಿಯಾ ರೋಗವನ್ನು ಹೋಗಲಾಡಿಸಲು ಸೊಳ್ಳೆಗಳ ನಿಯಂತ್ರಣ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ ತಿಳಿಸಿದರು.

ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮಳೆಗಾಲ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಮನೆಗಳ ಹೊರಭಾಗ, ಇತರೆ ಸ್ಥಳಗಳಲ್ಲಿ ನೀರು ನಿಂತು ಸೊಳ್ಳೆಗಳ ಆವಾಸಸ್ಥಾನವಾಗಲು ಅವಕಾಶವಾಗದಂತೆ ಎಚ್ಚರ ವಹಿಸಬೇಕು. ಮಲೇರಿಯಾ ಕಾಯಿಲೆಯು ಸೊಳ್ಳೆ ಕಚ್ಚುವುದರಿಂದ ಹರಡಲಿದ್ದು, ಇದರ ನಿರ್ಮೂಲನೆಗೆ ಪ್ರತಿಯೊಬ್ಬರು, ಪ್ರತಿಯೊಂದು ಸ್ಥಳವು ಸ್ವಚ್ಛತೆಯಿಂದ ಕೂಡಿರುವಂತೆ ನೋಡಿಕೊಳ್ಳ ಬೇಕಾಗಿರುವುದು ಅವಶ್ಯವಾಗಿದೆ ಎಂದರು.

ಅನಾಫಿಲಿಸ್ ಸೊಳ್ಳೆ ಮಳೆಗಾಲದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ಆದ್ದರಿಂದ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನೀರು ನಿಲ್ಲದಂತೆ ಸ್ವಚ್ಛವಾಗಿಟ್ಟುಕೊಳ್ಳಬೇಕು. ಕೆರೆ, ಕಟ್ಟೆಗಳಿಗೆ ಲಾರ್ವಾಹಾರಿ ಮೀನುಗಳಾದ ಗ್ಯಾಂಬೂಷಿಯ ಹಾಗೂ ಗಪ್ಪಿ ಮೀನುಗಳನ್ನು ಬಿಡಬೇಕು. ಮಲೇರಿಯಾದಿಂದ ಉಂಟಾಗುವ ಚಳಿ, ಜ್ವರ, ಬೆವರುವ ಲಕ್ಷಣಗಳು ಕಂಡುಬಂದರೆ ಕೂಡಲೇ ಹತ್ತಿರದ ಆರೋಗ್ಯ ಕೇಂದ್ರ ಅಥವಾ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು. ಮಲೇರಿಯಾ ರೋಗವನ್ನು ಹೋಗಲಾಡಿಸಲು ಸೊಳ್ಳೆಗಳ ನಿಯಂತ್ರಣ ಮಾಡಬೇಕು ಎಂದು ತಿಳಿಸಿದರು.

ಇದೇ ವೇಳೆ ಜಾಥಾದಲ್ಲಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಜಾಗೃತಿ ಮೂಡಿಸುವ ನಾಮಫಲಕ (ಪ್ಲೇ ಕಾರ್ಡ್) ಹಿಡಿದು ಸಾಗಿ ಮಲೇರಿಯಾ ನಿರ್ಮೂಲನೆ ಘೋಷವಾಕ್ಯಗಳನ್ನು ಮೊಳಗಿಸಿದರು. ಚಾಮರಾಜೇಶ್ವರ ದೇವಸ್ಥಾನದಿಂದ ಆರಂಭಗೊಂಡ ಜಾಥಾ ಬಿ. ರಾಚಯ್ಯ ಜೋಡಿರಸ್ತೆ ಮೂಲಕ ಸಾಗಿ ಜಿಲ್ಲಾಡಳಿತ ಭವನದಲ್ಲಿ ಮುಕ್ತಾಯವಾಯಿತು.

ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ರಾಜೇಶ್‌ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್, ತಾಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ಸರ್ಕಾರಿ ನರ್ಸಿಂಗ್ ಕಾಲೇಜಿನ ಉಪನ್ಯಾಸಕಿ ಪ್ರೇಮಾ, ಜೆಎಸ್‌ಎಸ್ ನರ್ಸಿಂಗ್ ಕಾಲೇಜಿನ ಕಮಲಾ, ಆರೋಗ್ಯ ಇಲಾಖೆಯ ದ್ವಾರಕೀಶ್, ಭಾಸ್ಕರ್, ನಾರಾಯಣಸ್ವಾಮಿ ಇತರರು ಇದ್ದರು.