ಜಿಲ್ಲೆ

ಮಳೆಯಿಂದ ಹಲವೆಡೆ ಹಾನಿ

ಹಾನಗಲ್ಲುಬಾಣೆ ಮಾರ್ಗದಲ್ಲಿ ರಸ್ತೆಯ ಮಣ್ಣು ಕುಸಿದಿರುವುದು.

ಸೋಮವಾರಪೇಟೆ: ಕಳೆದ ಮೂರು ದಿನಗಳಿಂದ ತಾಲೂಕಿನಾದ್ಯಂತ ಮಳೆ ಸುರಿಯುತ್ತಿದ್ದು ಅಲ್ಲಲ್ಲಿ ಹಾನಿ ಸಂಭವಿಸಿದೆ. ಕಾಫಿ ತೋಟಗಳಲ್ಲಿ ಮರಗಳು ಬಿದ್ದು ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.


ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾನಗಲ್ಲುಬಾಣೆ ಸಂಪರ್ಕ ರಸ್ತೆಯ ಒಂದು ಬದಿಯಲ್ಲಿ ಮಣ್ಣು ಕುಸಿಯುತ್ತಿದ್ದು, ರಸ್ತೆ ಸಂಚಾರ ಸ್ಥಗಿತಗೊಳ್ಳುವ ಭೀತಿ ಸೃಷ್ಟಿಸಿದೆ.


ಮಳೆಯಿಂದ ರಸ್ತೆಯ ಮೇಲೆಯೇ ನೀರು ಹರಿಯುತ್ತಿರುವುದರಿಂದ ಮಣ್ಣು ಕುಸಿಯಲಾರಂಭಿಸಿದ್ದು, ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಇತ್ತ ಗಮನ ಹರಿಸಬೇಕೆಂದು ಸ್ಥಳೀಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸೆಸ್ಕ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿಗೆ ತೆರಳುವ ರಸ್ತೆಯೂ ಇದಾಗಿದ್ದು, ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.