ಜಿಲ್ಲೆ

ಮಹತ್ವಾಕಾಂಕ್ಷೆ ಯೋಜನೆಯಡಿ ಆರೋಗ್ಯ ಸೇವೆ

ಸಿರವಾರ: ಗ್ರಾಮೀಣ ಭಾಗದ ಜನರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಾ.ನಂದಿತಾ ಹೇಳಿದರು.

ಕುರಕುಂದ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನೀತಿ ಆಯೋಗದ ಮಹತ್ವಾಕಾಂಕ್ಷೆ ಯೋಜನೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಗರ್ಭಿಣಿಯರು ಮತ್ತು ಮಕ್ಕಳ ಆರೋಗ್ಯ ತಪಾಸಣೆ ಶಿಬಿರದಲ್ಲಿ ಶುಕ್ರವಾರ ಮಾತನಾಡಿದರು.

ಮಹತ್ವಾಕಾಂಕ್ಷೆ ಯೋಜನೆಯಡಿ ಗರ್ಭಿಣಿಯರು ಮತ್ತು ಮಕ್ಕಳ ಆರೋಗ್ಯ ತಪಾಸಣೆ ಕೈಗೊಂಡು ಆರೋಗ್ಯ ಸೇವೆ ನೀಡಲಾಗುವುದು. ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಮತ್ತು ರಕ್ತಹೀನತೆ ಬಗ್ಗೆ ಮತ್ತು ಗಂಡಾಂತರ ಹೆರಿಗೆಯ ಲಕ್ಷಣಗಳ ಬಗ್ಗೆ ಮಾಹಿತಿ ನೀಡಬೇಕು. ಮಕ್ಕಳಿಗೆ ಸಮಯಕ್ಕೆ ಅನುಸಾರವಾಗಿ ಲಸಿಕೆ ನೀಡಬೇಕು. ಲಸಿಕೆಯಿಂದ ತಡೆಗಟ್ಟಬಹುದಾದ ರೋಗಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.

ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಾಧುರಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀದೇವಿ, ಆರೋಗ್ಯ ನಿರೀಕ್ಷಣಾಧಿಕಾರಿ ಯಲ್ಲಾಲಿಂಗ, ಲಸಿಕಾ ವಿಭಾಗದ ಮೇಲ್ವಿಚಾರಕ ಕೊಟ್ರೇಶ, ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಿತ ಅಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.