ಜಿಲ್ಲೆ

ಮಹಿಳೆಯರಿಗೆ ಮೀಸಲಾತಿ ನೀಡಿದ್ದು ಕಾಂಗ್ರೆಸ್

ಮದ್ದೂರು: ಮಹಿಳೆಯರಿಗೆ ಮೀಸಲಾತಿ ಸೇರಿದಂತೆ ಹೆಚ್ಚಿನ ಸವಲತ್ತುಗಳನ್ನು ನೀಡಿದ್ದು ಕಾಂಗ್ರೆಸ್ ಪಕ್ಷವಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಮಹಿಳೆಯರು ಹೆಚ್ಚಿನ ಶಕ್ತಿ ತುಂಬಬೇಕು ಎಂದು ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ಮನವಿ ಮಾಡಿದರು.


ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಆಯೋಜಿದ್ದ ನಾ ನಾಯಕಿ ಕಾರ್ಯಕ್ರಮಕ್ಕೆ ಹೋಗುವ ವಾಹನಗಳಿಗೆ ಪಟ್ಟಣದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸೋಮವಾರ ಚಾಲನೆ ನೀಡಿ ಮಾತನಾಡಿದರು.


ಮಹಿಳೆಯರ ಸಬಲೀಕರಣ ಕಾಂಗ್ರೆಸ್ ಪಕ್ಷದಿಂದ ಮಾತ್ರ ಎಂಬುವುದನ್ನು ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ರುಜುವಾತು ಮಾಡಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದು ತಿಳಿಸಿದರು.


ಮಹಿಳೆಯರಿಗೆ ಗ್ರಾಪಂ ಶೇ.50 ರಷ್ಟು ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷ, ಸ್ತ್ರೀಶಕ್ತಿ ಸ್ವ ಸಹಾಯ ಸಂಘಗಳನ್ನು ಜಾರಿಗೆ ತಂದಿದ್ದು ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮತ್ತು ನರೇಗಾವನ್ನು ಜಾರಿಗೆ ತಂದಿದ್ದು ಮನಮೋಹನ್‌ಸಿಂಗ್ ಅವರು ಪ್ರಧಾನಮಂತ್ರಿಯಾಗಿದ್ದ ವೇಳೆಯಲ್ಲಿ. ಈ ರೀತಿಯ ಹತ್ತಾರು ಯೋಜನೆಗಳನ್ನು ಜಾರಿಗೆ ತಂದು ಕಾಂಗ್ರೆಸ್ ಮಹಿಳೆಯರಿಗೆ ಸಾಕಷ್ಟು ಅನುಕೂಲ ಕಲ್ಪಿಸಿದೆ ಎಂದರು.


ಬಿಜೆಪಿ ಮತ್ತು ಜೆಡಿಎಸ್ ಅಧಿಕಾರದಲ್ಲಿದ್ದಾಗ ಮಹಿಳೆಯರಿಗೆ ಯಾವುದೇ ರೀತಿಯ ವಿಶೇಷ ಯೋಜನೆಗಳನ್ನು ಜಾರಿಗೆ ತರದೆ ಕಾಲಹರಣ ಮಾಡಿವೆ. ಬಿಜೆಪಿ ಮತ್ತು ಜೆಡಿಎಸ್‌ಗೆ ಮಹಿಳೆಯರು ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಕಿವಿಮಾತು ಹೇಳಿದರು.


ಮದ್ದೂರು ತಾಲೂಕಿನಿಂದ 20 ಬಸ್‌ಗಳಲ್ಲಿ 1 ಸಾವಿರಕ್ಕೂ ಹೆಚ್ಚು ಮಹಿಳೆಯರು ನಾ ನಾಯಕಿ ಕಾರ್ಯಕ್ರಮಕ್ಕೆ ತೆರಳಿದರು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ನಾಗೇಗೌಡ, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಆರ್.ಮೋಹನ್‌ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ್, ಟಿಎಪಿಸಿಎಂಎಸ್ ಉಪಾಧ್ಯಕ್ಷ ಪಿ.ರಾಘವ, ಮುಖಂಡರಾದ ಅರುಣ್‌ಕುಮಾರ್, ಮಹೇಶ್, ರಾಮಚಂದ್ರು, ರಾಘು ಇದ್ದರು.