ಚಾಮರಾಜನಗರ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಾಸ ಬಣಜಿಗ ಸಂಘದ ಸಹಯೋಗದಲ್ಲಿ ಮಾ.20 ರಂದು ಶ್ರೀಕೈವಾರ ತಾತಯ್ಯ ಜಯಂತ್ಯುತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಾಸ ಬಣಜಿಗ ಸಂಘ ಗೌರವಾಧ್ಯಕ್ಷ ಶ್ರೀನಿವಾಸಶೆಟ್ಟಿ ಹೇಳಿದರು.
ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಬೆಳಗ್ಗೆ 11 ಗಂಟೆಗೆ ಶ್ರೀಕೈವಾರ ತಾತಯ್ಯ ಭಾವಚಿತ್ರ ಮೆರವಣಿಗೆಗೆ ಸಮುದಾಯದ ಮುಖಂಡರು ಹಾಗೂ ಗಣ್ಯರು ಚಾಲನೆ ನೀಡಲಿದ್ದಾರೆ. ಮೆರವಣಿಗೆಯೂ ಅಲ್ಲಿಂದ ಹೊರಟು ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಡಿವಿಯೇಷನ್ ರಸ್ತೆ, ಶ್ರೀಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಸಾಗಿ ವೇದಿಕೆ ಕಾರ್ಯಕ್ರಮ ನಡೆಯಲಿರುವ ವರನಟ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ಅಂತ್ಯಗೊಳ್ಳಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮಧ್ಯಾಹ್ನ 12.30 ಗಂಟೆಗೆ ಪ್ರಾರಂಭವಾಗುವ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಉದ್ಘಾಟಿಸುವರು. ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಶಾಸಕರಾದ ಎಚ್.ಎಂ.ಗಣೇಶ್ ಪ್ರಸಾದ್, ಎ.ಆರ್.ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್ ಹಾಗೂ ಇನ್ನಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಾ.ಟಿ.ರಮೇಶ್ ಅವರು ಉಪನ್ಯಾಸ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಜನಾಂಗದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಗೋಷ್ಠಿಯಲ್ಲಿ ಜಿಲ್ಲಾ ದಾಸಬಣಜಿಗರ ಸಂಘದ ಕಾರ್ಯದರ್ಶಿ ಆರ್.ಸುಬ್ರಹ್ಮಣ್ಯ, ಮಾಜಿ ಗೌರವಾಧ್ಯಕ್ಷ ವಿಜಯ ಕೃಷ್ಣ, ಖಜಾಂಚಿ ಸಿ.ರಂಗರಾಜು, ಮುಖಂಡ ರಂಗರಾಮ್ ಹಾಜರಿದ್ದರು.