ಜಿಲ್ಲೆ

ಮಾದಕ ವಸ್ತುಗಳಿಂದ ವಿಧ್ಯಾರ್ಥಿಗಳ ಜೀವನ ಹಾನಿ

ಹಾಸನ: ಪ್ರಸ್ತುತ ಕಾಲಘಟ್ಟದಲ್ಲಿ ವಿಧ್ಯಾರ್ಥಿಗಳು ಮಾದಕ ವಸ್ತುಗಳನ್ನು ಬಳಸುತ್ತಿದ್ದು, ತಮ್ಮ ಜೀವನವನ್ನೇ ಹಾನಿ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಡೆಯುವ ಕೆಲಸವಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ.ದಾಕ್ಷಾಯಿಣಿ ಎಂದು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅಬಕಾರಿ ಇಲಾಖೆ, ಇವರುಗಳ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನದ ಜಾಥಾ ಕಾರ್ಯಕ್ರಮಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಜನ ಜಾಗೃತಿ ಜಾಥಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಯುವ ಪೀಳಿಗೆ ಮಾದಕ ವಸ್ತುಗಳಿಗೆ ಬಲಿಯಾಗುತ್ತಿರುವುದು ವಿಪರ್ಯಾಸ. ದುಶ್ಚಟಗಳಿಂದ ದೂರವಿದ್ದು, ತಮ್ಮ ಜೀವನದಲ್ಲಿ ಸಾರ್ಥಕತೆಯ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಅವರು ಮಾತನಾಡಿ, ಮಾದಕ ವಸ್ತುಗಳಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜಾಗತಿಕವಾಗಿ ಅರಿವು ಮೂಡಿಸಬೇಕು ಹಾಗೂ ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಇದರ ಬಗ್ಗೆ ಪೋಷಕರು ಎಚ್ಚರ ವಹಿಸಬೇಕು ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು ಅವರು ಮಾತನಾಡಿ ಮಕ್ಕಳಿಗೆ ಅನಗತ್ಯ ಹಣ ನೀಡುವುದ್ದರಿಂದ ಅವರ ದುಶ್ಚಟಗಳು ಹೆಚ್ಚಾಗುತ್ತಿವೆ. ಪೋಷಕರು ಅಗತ್ಯಕ್ಕೆ ಮಾತ್ರ ಹಣ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎನ್.ಶಿವಸ್ವಾಮಿ , ಅಬಕಾರಿ ಉಪ ಆಯುಕ್ತ ಮೋತಿಲಾಲ್, ಹಿಮ್ಸ್‌ನ ಡಾ. ಚನ್ನವೀರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್.ಸಿ.ಲೋಕೇಶ್ ಇದ್ದರು ಜಾಗೃತಿ ಜಾಥದಲ್ಲಿ ನರ್ಸಿಂಗ್ ಕಾಲೇಜು ಹಾಗೂ ಹಾಸನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಮತ್ತಿತರರು ಭಾಗವಹಿಸಿದ್ದರು.