ಜಿಲ್ಲೆ

ಮಾದಕವಸ್ತು ಮಾರುತ್ತಿದ್ದ ಮೂವರ ಬಂಧನ

ನಾಪೋಕ್ಲು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಹಾಗೂ ಸರಬರಾಜು ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮೂವರು ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ್ದಾರೆ.

ಎಮ್ಮೆಮಾಡು ಗ್ರಾಮದ ನಿವಾಸಿಗಳಾದ ಎಂ.ಎಚ್.ಸಾದಿಕ್ (30), ಕೆ.ಎಂ. ಅಶ್ರಫ್ (44) ಮತ್ತು ಸರ್ಫುದ್ದೀನ್ (24) ಬಂಧಿತರು. ಇವರಿಂದ 10.37 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಮಾ.20ರಂದು ಎಮ್ಮೆಮಾಡು ಗ್ರಾಮದ ಕುರುಳಿ ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು.

ಮಡಿಕೇರಿ ಡಿಎಸ್ಪಿ ಪಿ.ಎ.ಸೂರಜ್, ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ (ಪ್ರಭಾರ) ಪಿ.ಅನೂಪ್ ಮಾದಪ್ಪ, ನಾಪೋಕ್ಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಎಸ್ಪಿ ಶ್ಲಾಘನೆ: ಈ ಪ್ರಕರಣವನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.