ಬೆಳಗಾವಿ: ಕೋವಿಡ್-19 ತಡೆಗಟ್ಟುವ ವಿಷಯದಲ್ಲಿ ಸ್ವತಂತ್ರ ನಿರ್ಧಾರ ಕೈಗೊಳ್ಳಲು ಮತ್ತು ನಿಯಮಗಳನ್ನು ರೂಪಿಸಿಲು ಜಿಲ್ಲಾಡಳಿತಕ್ಕೆ ಅಧಿಕಾರ ಇಲ್ಲ. ಸರ್ಕಾರ ಹೊರಡಿಸುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ ಕುಮಾರ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರೊನಾ 2ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನರಲ್ಲಿ ಸೋಂಕು ಹರಡದಂತೆ ಸರ್ಕಾರ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಕುರಿತು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ, ಎಲ್ಲ ತಾಲೂಕು ತಹಸೀಲ್ದಾರಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಮೈಸೂರು ಜಿಲ್ಲೆಯಲ್ಲಿನ ಕೆಲ ಪ್ರಕರಣಗಳ ಬಳಿಕ ರಾಜ್ಯದಲ್ಲಿ ಸೋಂಕು ಹೆಚ್ಚಳ, ನಿಯಂತ್ರಣ ಕುರಿತು ಸ್ಥಳೀಯ ಸಮಸ್ಯೆಗೆ ಅನುಗುಣವಾಗಿ ನಿಯಮಗಳನ್ನು ರೂಪಿಸಲು ಜಿಲ್ಲಾಡಳಿತಗಳಿಗೆ ಸರ್ಕಾರ ಅವಕಾಶ ಕೊಟ್ಟಿಲ್ಲ. ಬದಲಾಗಿ ಸರ್ಕಾರವು ನಿಯಮಗಳನ್ನು ರೂಪಿಸುತ್ತಿದೆ. ಲೋಕಸಭೆ ಉಪ ಚುನಾವಣೆ ಕೆಲಸದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿ ಭಾಗವಹಿಸಿದ್ದರಿಂದ ಕೋವಿಡ್-19 ಬಗ್ಗೆ ಹೆಚ್ಚು ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ. ಇದೀಗ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ಎಲ್ಲ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿ ವಹಿಸಲಾಗಿದೆ ಎಂದು ಹೇಳಿದರು.
ನೆರೆಯ ರಾಜ್ಯ ಮತ್ತು ರಾಜ್ಯದ ವಿವಿಧ ಭಾಗಗಳಿಂದ ಜಿಲ್ಲೆಗೆ ಬರುವವರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಆದರೆ, ಅವರೆಲ್ಲರೂ ಸ್ವಯಂ ಪ್ರೇರಣೆಯಿಂದ ಕೋವಿಡ್-19 ಪರೀಕ್ಷಾ ವರದಿ ಜತೆಯಲ್ಲಿ ತೆಗೆದುಕೊಂಡು ಬರಬೇಕು. ಅಲ್ಲದೆ, ತಮ್ಮ ಸಮೀಪದ ಆಸ್ಪತ್ರೆಯಲ್ಲಿ ಎಲ್ಲರೂ ಕೋವಿಡ್-19 ಪರೀಕ್ಷೆಗೆ ಒಳಪಡುವುದು ಸೂಕ್ತ. ಕೆಲ ಸಮಯದಲ್ಲಿ ವರದಿ ಬರುವುದು ವಿಳಂಬವಾಗುತ್ತಿರುವ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದೆ. ಈ ಕುರಿತು ಸರ್ಕಾರವೇ ಕ್ರಮ ಕೈಗೊಳ್ಳಲಿದೆ ಎಂದರು.
ಜಿಲ್ಲೆಯಲ್ಲಿ ರೆಮ್‌ಡಿಸಿವಿರ್ ಚುಚ್ಚುಮದ್ದು ಕೊರತೆ ಇಲ್ಲ. ಯಾರಿಗಾದರೂ ಸಮಸ್ಯೆ ಇದ್ದರೆ ಅವರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಕುರಿತು ದೂರುಗಳು ಬಂದರೆ ಕ್ರಮ ಜರುಗಿಸಲಾಗುವುದು. ಪಿಯುಸಿ ಪೂರಕ ಪರೀಕ್ಷೆ, ಪದವಿ ಪರೀಕ್ಷೆ ನಡೆಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಸರ್ಕಾರದ ನಿರ್ದೇಶನದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ ಕುಮಾರ ಸ್ಪಷ್ಟಪಡಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಚುಚ್ಚುಮದ್ದು ಸಂಗ್ರಹ ಇದೆ. ಕಾಳಸಂತೆಯಲ್ಲಿ ಮಾರಾಟ ಮಾಡುವ ಪ್ರಶ್ನೆಯೇ ಇಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ರೆಮ್‌ಡಿಸಿವಿರ್ ಚುಚ್ಚುಮದ್ದು ನೀಡಲು ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿರುವ ಕುರಿತು ಸಾರ್ವಜನಿಕರು ದೂರು ಸಲ್ಲಿಸಿಲ್ಲ. ಒಂದು ವೇಳೆ ಯಾರಾದರೂ ದೂರು ಸಲ್ಲಿಸಿದರೆ ಅಂತಹ ಆಸ್ಪತ್ರೆಯ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು. ರೆಮ್‌ಡಿಸಿವಿರ್ ಚುಚ್ಚುಮದ್ದು ವಿಷಯದಲ್ಲಿ ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಲಸಿಕೆ ಅಧಿಕಾರಿ ಐ.ಪಿ.ಗಡಾದ ಸ್ಪಷ್ಟಪಡಿಸಿದರು.
ಸದ್ಯ ದೇಶದ ತುಂಬೆಲ್ಲ ಕರೊನಾ 2ನೇ ಅಲೆ ಜೋರಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ನಗರ ಪ್ರದೇಶಗಳಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲನೆ ಮಾಡುವುದು ಕಡ್ಡಾಯ. ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದು ಜನರ ಕರ್ತವ್ಯವಾಗಿದೆ. ನಿಟ್ಟಿನಲ್ಲಿ ಜನರು ತಮ್ಮ ಹೊಣೆಗಾರಿಕೆ ಪ್ರದರ್ಶಿಸಬೇಕಿದೆ. ನಗರದಲ್ಲಿ ಕೋವಿಡ್-19 ಪರೀಕ್ಷೆ ಪ್ರಮಾಣ ಹೆಚ್ಚಿಸುವುದರ ಜತೆಗೆ ಲಸಿಕೆ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ. ಹೋಟೆಲ್, ದೇವಸ್ಥಾನ, ವಾಣಿಜ್ಯ ಮಳಿಗೆಗಳು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಎಪಿಎಂಸಿ ಮಾರುಕಟ್ಟೆಗಳು, ಚಿಲ್ಲರೆ ಮಾರುಕಟ್ಟೆಗಳಲ್ಲಿ ಜನ ಸೇರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಕರೊನಾ ನಿಯಮಗಳನ್ನು ಉಲ್ಲಂಘಿಸಿದರೆ ಅಂತಹ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆ ಆಯುಕ್ತ ಕೆ.ಎಚ್.ಜಗದೀಶ ತಿಳಿಸಿದರು.