ವಿಜಯಪುರ: ಅತಿವೃಷ್ಟಿ ಪರಿಸ್ಥಿತಿ ಹಾಗೂ ಮುಂಬರುವ ಮಳೆಗಾಲದಲ್ಲಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಎಲ್ಲ ಇಲಾಖೆ ಅಧಿಕಾರಿಗಳು ಮುಂಜಾಗ್ರತೆ ಕ್ರಮ ಕೈಗೊಂಡು ಯಾವುದೇ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮುಂಗಾರು ಮಳೆಯ ಮುಂಜಾಗ್ರತೆ ಕ್ರಮಗಳ ಕುರಿತ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿ, ಮಳೆಗಾಲದ ವೇಳೆ ತಗ್ಗು ಪ್ರದೇಶಗಳಲ್ಲಿ ನೀರು ಹರಿಯದೇ ಒಂದೇ ಕಡೆ ನಿಲ್ಲುವುದರಿಂದ ಸಾಂಕ್ರಾಮಿಕ ರೋಗ ಉಲ್ಬಣವಾಗುತ್ತದೆ. ಹೀಗಾಗಿ ಅಂತಹ ಪ್ರದೇಶ ಗುರುತಿಸಿ, ಮಳೆ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಚರಂಡಿ ನೀರು ಹರಿದು ಹೋಗುವಂತೆ ನೋಡಿಕೊಳ್ಳಬೇಕು ಎಂದರು.
ಮಳೆಗಾಲಕ್ಕೆ ಈಗಿನಿಂದಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ವಿಪತ್ತುಗಳಿಗೆ ತುತ್ತಾಗುವ ಪ್ರದೇಶಗಳನ್ನು ಗುರುತಿಸಬೇಕು. ಅಂತಹ ಪ್ರದೇಶಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ಒದಗಿಸಿ, ಜಾಗೃತಿ ಮೂಡಿಸುವ ಮೂಲಕ ಅನಾಹುತಗಳು ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಮಳೆ, ಸಿಡಿಲುಗಳಿಂದ ರಕ್ಷಿಸಿಕೊಳ್ಳಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ತಲುಪಿಸಿ ಜಾಗೃತಿ ಮೂಡಿಸಬೇಕು. ಅತಿವೃಷ್ಟಿಗಾಗಿ ಜಿಲ್ಲಾ ಕೇಂದ್ರದಲ್ಲಿ ಈಗಾಗಲೇ ಟೋಲ್ ಫ್ರೀ 1077 (ದೂ-08352-221261) ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ ಅದರ ಪ್ರಯೋಜನೆ ಪಡೆದುಕೊಳ್ಳಬೇಕೆಂದು ಸಾರ್ವಜನಿಕರಿಗೆ ತಿಳಿಸಬೇಕು ಎಂದರು.
ತಾಲೂಕು ಹಾಗೂ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಚುರುಕಿನಿಂದ ಕಾರ್ಯನಿರ್ವಹಿಸಬೇಕು. ಒಂದೇ ಕಡೆ ಕೂರದೇ ತಮ್ಮ ವ್ಯಾಪ್ತಿಯ ಪ್ರತಿಯೊಂದು ಹಳ್ಳಿ, ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಎಲ್ಲೆಲ್ಲಿ ನೀರು ನಿಂತು ತೊಂದರೆಯಾಗಲಿದೆ ಎಂಬುದು ಕುರಿತು ಮುಂಚೆ ಅಂತಹ ಜಾಗಗಳನ್ನು ಗುರುತಿಸಿಕೊಂಡಿರಬೇಕು. ಯಾವುದೇ ಅನಾಹುತಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಂಡು ಅನಾಹುತ ತಪ್ಪಿಸಲು ಪ್ರಯತ್ನಿಸಬೇಕು, ಏನೇ ಅನಾಹುತ ಸಂಭವಿಸಿದರೆ ಅದಕ್ಕೆ ನೇರವಾಗಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.
ಸ್ಥಳೀಯ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸಲು ಪ್ರಯತ್ನಿಸಬೇಕು. ಆ ದೂರು ತಾಲೂಕು ಮಟ್ಟ, ಜಿಲ್ಲಾ ಮಟ್ಟಕ್ಕೆ ರಾಜ್ಯಮಟ್ಟಕ್ಕೆ ಹೋಗದಂತೆ ನೋಡಿಕೊಂಡು ಯಾವುದೇ ದೂರು ಬರದ ಹಾಗೆ ನೋಡಿಕೊಳ್ಳಬೇಕು. ಪ್ರವಾಹ ಪರಿಸ್ಥಿತಿಯ ನಿರ್ವಹಣೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಜಿಲ್ಲೆಯ ತಾಲೂಕುಗಳಿಗೆ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ನದಿಯ ಪಕ್ಕದಲ್ಲಿರುವ 3-4 ಗ್ರಾಮ ಪಂಚಾಯತಿಗಳಿಗೆ ಒಬ್ಬರಂತೆ ತಾಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳೆಂದು ನೇಮಕ ಮಾಡಿಕೊಳ್ಳಬೇಕು. ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು
ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ಶಂಕರಗೌಡ ಸೋಮನಾಳ, ವಿಜಯಪುರ ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗತ್ತಿ, ಇಂಡಿ ಎಸಿ ರಾಮಚಂದ್ರ ಗಡದೆ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಂಗಾರು ಹಂಗಾಮಿನಲ್ಲಿ ಸಮರ್ಪಕವಾಗಿ ಬಿತ್ತನೆ ಬೀಜ ಗೊಬ್ಬರ ವಿತರಣೆಯಾಗಬೇಕು. ಗೊಬ್ಬರ ಮಾರಾಟ ಅಂಗಡಿಗಳಲ್ಲಿ ಕಡ್ಡಾಯವಾಗಿ ದಾಸ್ತಾನು, ದರ ವಿವರ ನಮೂದಿಸುವಂತೆ ಸೂಚನೆ ನೀಡಬೇಕು. ಬಿತ್ತನೆ ಬೀಜ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಹೆಚ್ಚಿನ ಬೆಲೆಗೆ ಮಾರಾಟವಾಗದಂತೆ ನೋಡಿಕೊಳ್ಳಬೇಕು.ವಿಜಯಮಹಾಂತೇಶ ದಾನಮ್ಮನವರ, ಡಿಸಿ