ಯಳಂದೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನದ ಹಗರಣ ಆರೋಪ ಬರುತ್ತಿದ್ದಂತೆ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ತಮ್ಮ ತಪ್ಪಿಲ್ಲ ಎಂದ ಮೇಲೆ ಕಾನೂನು ಹೋರಾಟ ಮಾಡುವ ಬದಲು ಏಕೆ ನಿವೇಶನಗಳನ್ನು ಮತ್ತೆ ವಾಪಸ್ ನೀಡಿದರು? ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುತ್ತದೆ. ಅವರ ವಿರುದ್ಧದ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.
ಅವರು ಭಾನುವಾರ ಖಾಸಗಿ ಭೇಟಿ ನಿಮಿತ್ತ ಬೆಂಗಳೂರಿನಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದ ವೇಳೆ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಭವನದ ಮುಂಭಾಗ ಇರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರವಾಗಿ ಭಾಗಿಯಾಗಿದ್ದಾರೆ. ಇದರ ವಿರುದ್ಧ ನಮ್ಮ ಆರೋಪಗಳಿಗೆ ಜಯ ಸಿಗುವ ದಿನಗಳು ದೂರವಿಲ್ಲ ಎಂದರು.
ರಾಜ್ಯದಲ್ಲಿ ಅತಿವೃಷ್ಟಿಯಾಗಿದೆ, ಅತಿಯಾದ ಮಳೆಯಿಂದ ರೈತರ ಲಕ್ಷಾಂತರ ಎಕರೆ ಕೃಷಿಭೂಮಿಗೆ ಹಾನಿಯಾಗಿದೆ. ಅನೇಕರು ಮನೆ-ಮಠಗಳನ್ನು ಕಳೆದುಕೊಂಡಿದ್ದಾರೆ, ಅನೇಕ ರಸ್ತೆಗಳು ಹಾಳಾಗಿವೆ. ಈ ಬಗ್ಗೆ ರಾಜ್ಯ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ಮಳೆಯಿಂದ ಸಂಕಷ್ಟ ಎದುರಿಸುತ್ತಿರುವ ರೈತರು ಹಾಗೂ ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸುವ ಪುರಸೊತ್ತು ರಾಜ್ಯ ಸರ್ಕಾರಕ್ಕಾಗಲಿ, ಇಲ್ಲಿರುವ ಮಂತ್ರಿಗಳಿಗಾಗಲಿ ಇಲ್ಲ. ಜನರ ಸಮಸ್ಯೆಗಳನ್ನು ಆಲಿಸಲು ಇವರ ಬಳಿ ಸಮಯವಿಲ್ಲ, ಸರ್ಕಾರ ಹಗರಣಗಳ ಸುತ್ತಲೇ ಸುತ್ತುತ್ತಿದೆ ಎಂದು ಆರೋಪಿಸಿದರು.
ಇದಕ್ಕೂ ಮುಂಚೆ ಪಟ್ಟಣದ ಅಂಬೇಡ್ಕರ್ ಭವನದ ಮುಂಭಾಗ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಅವರಿಗೆ ಸ್ವಾಗತ ಕೋರಿದರು.
ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕ ಎಸ್.ಬಾಲರಾಜು, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎನ್.ಅನಿಲ್, ಪಪಂ ಮಾಜಿ ಉಪಾಧ್ಯಕ್ಷ ಭೀಮಪ್ಪ, ಮುಖಂಡರಾದ ರಾಮು, ಮಹೇಶ್ ಮತ್ತಿತರರು ಹಾಜರಿದ್ದರು.