ಜಿಲ್ಲೆ

ಮುಚ್ಚುವ ಪರಿಸ್ಥಿತಿಯಲ್ಲಿ ಸರ್ಕಾರಿ ಶಾಲೆಗಳು

ಎ.ಎಸ್.ಮಣಿಕಂಠ

ಚಾಮರಾಜನಗರ: ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರಗಳು ಹಲವಾರು ಕಾರ್ಯಕ್ರಮಗಳನ್ನು ಆಯೋನೆ ಮಾಡುತ್ತಿದೆ, ಅದಾಗ್ಯೂ ಹಲವಾರು ಸರ್ಕಾರಿ ಶಾಲೆಗಳು ಮುಚ್ಚುವ ಹಂತದಲ್ಲಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸಿ.ಕೆ.ರಾಮಸ್ವಾಮಿ ಆತಂಕ ವ್ಯಕ್ತಪಡಿಸಿದರು.

ನಗರದ ಉಪ್ಪಾರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯಿತಿ, ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುವ ದೃಷ್ಟಿಯಲ್ಲಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬರುತ್ತಿದೆ. ಅದಾಗ್ಯೂ ಸರ್ಕಾರಿ ಶಾಲೆಗಳು ಮುಚ್ಚುವಂತಹ ಪರಿಸ್ಥಿತಿಗೆ ತಲುಪುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿಯನ್ನು ಪ್ರಾರಂಭಿಸಬೇಕು. ಈ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ ಮಾತನಾಡಿ, ಶಾಲಾ ಶಿಕ್ಷಣ ಇಲಾಖೆಯಿಂದ ಈ ವರ್ಷದಲ್ಲಿ ಕಲಿಕಾ ಹಬ್ಬವನ್ನು ಆಯೋಜಿಸಲಾಗಿದೆ. ಮಕ್ಕಳ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರದಲ್ಲಿ ಪರಿಪೂರ್ಣಗೊಳಿಸಲು 1-5 ನೇ ತರಗತಿ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಪ್ರಸ್ತುತ ಸರ್ಕಾರಿ ಪ್ರೌಢಶಾಲೆಯಲ್ಲಿರುವ ಹಲವಾರು ಮಕ್ಕಳಿಗೆ ಕನ್ನಡವನ್ನು ಓದಲು ಮತ್ತು ಬರೆಯಲು ಬರುವುದಿಲ್ಲ. ಅಂತಹ ಮಕ್ಕಳಲ್ಲಿ ಎ್ಎಲ್‌ಎನ್ ಕಲಿಕೆ ಪೂರ್ಣವಾಗದ ಹೊರತು. ಗುಣಮಟ್ಟದ ಶಿಕ್ಷಣ ಕೊಡಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಕ್ಕಳು ಅತ್ಯಂತ ಆಸಕ್ತಿಯಿಂದ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿ ರಾಜೀವ್, ವೈ.ಎಸ್.ಮಹದೇವಯ್ಯ, ದೈಹಿಕ ಶಿಕ್ಷಣ ಅಧಿಕಾರ ಎಸ್.ಬಸವರಾಜು, ಶಿಕ್ಷಕರ ಸಂಘದ ಕಾರ್ಯದರ್ಶಿ ಎನ್.ಸುಧಾ, ವಿವಿಧ ಶಾಲೆಯ ಮುಖ್ಯ ಶಿಕ್ಷಕರಾದ ವೆಂಕಟೇಶ್ ನಾಯಕ್, ವಿ.ಮಹದೇವಯ್ಯ, ಮಹೇಶ್, ನಾಗರತ್ನ, ಬಸವ ಶೆಟ್ಟಿ, ನಟರಾಜ್, ಪ್ರಕಾಶ್, ರಂಗಸ್ವಾಮಿ ಇತರರು ಹಾಜರಿದ್ದರು.