ಮೈಸೂರು: ಮೈಸೂರು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ಜ.24ರಂದು ಬಸ್‌ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಆರ್.ಅಶೋಕ್‌ಕುಮಾರ್ ತಿಳಿಸಿದ್ದಾರೆ.
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನೌಕರರು ಜ.24ರಂದು ರಾಜ್ಯಾದ್ಯಂತ ಮುಷ್ಕರ ನಡೆಸಲು ತೀರ್ಮಾನಿಸಿದ್ದು, ಕರ್ತವ್ಯವನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಇದರಿಂದ ಬಸ್ ಸಂಚಾರ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರ್.ಅಶೋಕ್‌ಕುಮಾರ್, ಈಗಾಗಲೇ ಸಾರಿಗೆ ಸಂಸ್ಥೆಯ ನೌಕರರ ಸಂಘದ ಮುಖಂಡರೊಂದಿಗೆ ಮಾತನಾಡಿದ್ದು, ಬಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡುವುದಿಲ್ಲ. ಬರೀ ಪ್ರತಿಭಟನೆ ಮಾಡುವುದಾಗಿ ಮುಖಂಡರು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಮೈಸೂರು ವಿಭಾಗದಲ್ಲಿ 1072 ಬಸ್‌ಗಳಿದ್ದು, 968 ಮಾರ್ಗಗಳಲ್ಲಿ 7,834 ಟ್ರಿಪ್‌ಗಳಲ್ಲಿ ಸಂಚರಿಸುತ್ತಿವೆ. 4700 ಸಿಬ್ಬಂದಿ ಇದ್ದು, ಅವರಲ್ಲಿ 120 ಜನ ವಾರದ ರಜೆ ಇರುವವರಿದ್ದಾರೆ. ಇವರಲ್ಲಿ ಕೆಲವರು ವಿಭಾಗೀಯ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಲ್ಲಿ ಸಾರಿಗೆ ನೌಕರರ ಮುಷ್ಕರದಿಂದ ಪ್ರಯಾಣಿಕರಿಗೆ ಯಾವುದೇ ತೊಂದರೆಯುಂಟಾಗುವುದಿಲ್ಲ. ಎಂದಿನಂತೆ ಬಸ್‌ಗಳು ಸಂಚರಿಸಲಿವೆ ಎಂದು ತಿಳಿಸಿದರು.