ಮದ್ದೂರು: ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘವು ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಂಡಿದ್ದು, ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಮುಷ್ಕರ ಗುರುವಾರ 3 ನೇ ದಿನಕ್ಕೆ ಕಾಲಿಟ್ಟಿದೆ.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ರಾಜ್ಯದ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ ಎಂದರು.
ಸರ್ಕಾರ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವವರೆಗೂ ಅನಿರ್ದಿಷ್ಟಾವಧಿ ಮುಷ್ಕರ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಸಂಘದ ಗೌರವಾಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ರಘು, ಜಿಲ್ಲಾ ಸಂಚಾಲಕ ಪುರುಷೋತ್ತಮ ಹಾಗೂ ಕುಮಾರ್, ಬಾಬು, ಪುಟ್ಟಸ್ವಾಮಿ, ಶ್ರೀಧರ್ ಮತ್ತಿತರರು ಇದ್ದರು.