ಶನಿವಾರಸಂತೆ: ರಕ್ತದಾನದಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಮನೆಹಳ್ಳಿ ಮಠದ ಮಹಾಂತ ಶಿವಲಿಂಗ ಸ್ವಾಮೀಜಿ ಹೇಳಿದರು.
ಕೊಡಗು ಜಿಲ್ಲಾ ಒಕ್ಕಲಿಗರ ಯುವ ವೇದಿಕೆ, ಜಿಲ್ಲಾ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಗುಡುಗಳಲೆಯ ಬಸಪ್ಪ ಸಭಾಂಗಣದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.
ರಕ್ತದಾನ ಮಾಡುವುದರಿಂದ ಪರಿಶುದ್ಧ ರಕ್ತ ಉತ್ಪತ್ತಿಯಾಗುವುದರ ಜತೆಗೆ ಆರೋಗ್ಯವೂ ವೃದ್ಧಿಸುತ್ತದೆ. ಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ರಕ್ತದಾನ ಮಾಡುವ ವ್ಯಕ್ತಿ ಮತ್ತೊಬ್ಬ ವ್ಯಕ್ತಿಯ ಜೀವ ಉಳಿಸಿದಂತಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಗಿರೀಶ್ ಮಲ್ಲಪ್ಪ ಮಾತನಾಡಿ, ಯುವ ವೇದಿಕೆಯಿಂದ ಹಲವು ಸಮಾಜ ಮುಖಿ ಕಾರ್ಯ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕೆಲಸದಲ್ಲಿ ತೊಡಗಿಕೊಳ್ಳಲಾಗುವುದು ಎಂದರು.
ಜಿಲ್ಲಾ ರಕ್ತ ನಿಧಿ ಕೇಂದ್ರದ ವೈದ್ಯ ಡಾ.ಕರುಂಬಯ್ಯ ಮಾತನಾಡಿ, ರಕ್ತದಾನ ಮಾಡುವುದರಿಂದ ಅನೇಕರ ಪ್ರಾಣ ಉಳಿಯುತ್ತದೆ. ಯುವ ಸಮೂಹ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗುತ್ತಿದೆ ಎಂದರು.
ನಿವೃತ್ತ ಯೋಧ ಮಹೇಶ್, ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಅಜ್ಜಳ್ಳಿ ನವೀನ್, ಮಾಧ್ಯಮ ಸಲಹೆಗಾರ ಧನುಂಜಯ್, ನಿರ್ದೇಶಕರಾದ ಭರತ್ ಹುಲುಸೆ, ರಕ್ಷಿತ್ ಇತರರಿದ್ದರು.