ಜಿಲ್ಲೆ

ಮೂಲಸೌಲಭ್ಯ ಕಲ್ಪಿಸಲು ಆಗ್ರಹಿಸಿ ಯುವರಾಜ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು: ಕಾಲೇಜಿಗೆ ಮೂಲಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಯುವರಾಜ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದರು.

ಕಾಲೇಜಿನ ಶೌಚಗೃಹ ಬಳಸುವ ಸ್ಥಿತಿಯಲ್ಲಿ ಇಲ್ಲ. ಈ ಕುರಿತು ಕಾಲೇಜು ಆಡಳಿತ ಮಂಡಳಿಯ ಗಮನಕ್ಕೆ ತಂದರೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಹಲವಾರು ವಿದ್ಯಾರ್ಥಿಗಳ ಆರೋಗ್ಯ ಹದಗೆಡುತ್ತಿದ್ದು, ಅವರ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತಿದೆ. ಕೂಡಲೇ ಶೌಚಗೃಹದ ಅವ್ಯವಸ್ಥೆ ಸರಿಪಡಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಕಾಲೇಜಿನಲ್ಲಿ ಕುಡಿಯುವ ನೀರಿನ ವ್ಯವಸ್ಥೆಯೂ ಸರಿಯಾಗಿಲ್ಲ. ಐಡಿ ಕಾರ್ಡ್‌ಗೆ ಹಣ ಪಡೆದಿದ್ದು, ಇದುವರೆಗೆ ನೀಡಿಲ್ಲ. ಉಪನ್ಯಾಸಕರ ಕೊರತೆ ಇದ್ದು, ಪಾಠ ಪ್ರವಚನಗಳು ಸರಿಯಾಗಿ ನಡೆಯುತ್ತಿಲ್ಲ. ಇಲ್ಲಿ ವಿದ್ಯಾಭ್ಯಾಸ ಮಾಡಲು ಹೊರ ಜಿಲ್ಲೆಗಳಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ. ಆದರೆ, ಕಾಲೇಜು ಅವ್ಯವಸ್ಥೆಯ ಆಗರವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.