ಚಿಕ್ಕಮಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜಯಂತಿ ಹಿನ್ನೆಲೆಯಲ್ಲಿ ಕೋಮುವಾದ ಧಿಕ್ಕರಿಸಿ, ಸಂವಿಧಾನ ರಕ್ಷಿಸಿ ಘೋಷವಾಕ್ಯದಲ್ಲಿ ಮೇ ೮ರಂದು ಬೆಂಗಳೂರಿನಲ್ಲಿ ಜನಕ್ರಾಂತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಲ್.ಎಸ್.ಶ್ರೀಕಾಂತ್ ತಿಳಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ವಸಂತ ನಗರದ ಡಾ.ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ ೧೧ ಕ್ಕೆ ನಡೆಯುವ ಕಾರ್ಯಕ್ರಮವನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಉದ್ಘಾಟಿಸಲಿದ್ದು, ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಕಾರ್ಮಿಕ ಸಚಿವ ಸಂತೋಷ್‌ಲಾಡ್ ಭಾಗವಹಿಸಲಿದ್ದಾರೆ. ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಡಿಎಸ್‌ಎಸ್ ಸಂಸ್ಥಾಪಕ ಬಿ.ಕೃಷ್ಣಪ್ಪ ಅವರ ಜಯಂತಿಯನ್ನು ಸರ್ಕಾರದ ಮಟ್ಟದಲ್ಲಿ ಆಚರಿಸಬೇಕು. ಎಸ್‌ಸಿಪಿ, ಟಿಎಸ್‌ಪಿ ಹಣ ದುರ್ಬಳಕೆ ತಡೆಯಬೇಕು. ಬಗರ್ ಹುಕುಂ ಸಾಗವಳಿ ಅರ್ಜಿದಾರರಿಗೆ ಭೂಮಿ ಮಂಜೂರು ಮಾಡುವುದು, ಬಡವರಿಗೆ ಮನೆ, ನಿವೇಶನ ನೀಡುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಸಮಾವೇಶದಲ್ಲಿ ಸರ್ಕಾರದ ಮುಂದಿಡಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಡಿಎಸ್‌ಎಸ್ ಮುಖಂಡರಾದ ರವಿಶಂಕರ್, ನಂಜುAಡಪ್ಪ, ಡಿ.ರಾಮು ಉಪಸ್ಥಿತರಿದ್ದರು.