ಮೈಸೂರು: ಆ.1ರಿಂದ ಆಗಸ್ಟ್ 4 ರವರೆಗೆ ನಡೆಯಲಿರುವ ಸೇನಾ ರ‍್ಯಾಲಿಗೆ ಆಗಮಿಸುವ ಎಲ್ಲ ಅಭ್ಯರ್ಥಿಗಳಿಗೆ ಸೂಕ್ತವಾದ ವ್ಯವಸ್ಥೆಯನ್ನು ಕಲ್ಪಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚಿಸಿದರು.
ನಗರದಲ್ಲಿರುವ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸೈನಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ 1,723 ಅಭ್ಯರ್ಥಿಗಳು ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ನಡೆಯಲಿರುವ ರ‌್ಯಾಲಿಯಲ್ಲಿ ಭಾಗವಹಿಸಲಿದ್ದು, ಎಲ್ಲ ಅಭ್ಯರ್ಥಿಗಳಿಗೂ ನಂಜರಾಜ್ ಬಹದ್ದೂರ್ ಛತ್ರದಲ್ಲಿ ವಾಸ್ತವ್ಯ ವ್ಯವಸ್ಥೆ ಕಲ್ಪಿಸಲು, ಕ್ರೀಡಾಂಗಣದಲ್ಲಿ ನಾಲ್ಕು ಇಂಟರ್ನೆಟ್ ವ್ಯವಸ್ಥೆ, ಒಂದು ಲ್ಯಾಂಡ್‌ಲೈನ್‌ವ್ಯವಸ್ಥೆ ಹಾಗೂ ಅಭ್ಯರ್ಥಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಶಿಕ್ಷಕರ ಭವನ ಮತ್ತು ರ‌್ಯಾಲಿ ನಡೆಯಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ತಾತ್ಕಾಲಿಕ ಶೌಚಗೃಹ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಅಭ್ಯರ್ಥಿಗಳನ್ನು ನಂಜರಾಜ ಬಹದ್ದೂರ್ ಛತ್ರದಿಂದ ಚಾಮುಂಡಿ ವಿಹಾರ ಕ್ರೀಡಾಂಗಣಕ್ಕೆ ಕರೆದುಕೊಂಡು ಹೋಗಲು ಮಿನಿ ಬಸ್ ವ್ಯವಸ್ಥೆ ಮಾಡುವುದು. ಜತೆಗೆ, ನಂಜುರಾಜ್ ಬಹದ್ದೂರ್ ಛತ್ರ, ಶಿಕ್ಷಕರ ಭವನ ಮತ್ತು ಚಾಮುಂಡಿ ವಿಹಾರ ಕ್ರೀಡಾಂಗಣದ ಸುತ್ತಮುತ್ತಲಿನ ಪ್ರದೇಶವನ್ನು ಶುಚಿಗೊಳಿಸುವ ಜವಾಬ್ದಾರಿಯನ್ನು ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ವಹಿಸಿದರು.
ಸೇನಾ ಭರ್ತಿ ನಡೆಯಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ವೈದ್ಯಕೀಯ ಸೇವೆ, ಆಂಬುಲೆನ್ಸ್ ವ್ಯವಸ್ಥೆ, ಅಗ್ನಿಶಾಮಕ ಸೇವೆ, ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಹಾಗೂ ಸೇನಾ ಭರ್ತಿ ರ‌್ಯಾಲಿಗೆ ಅಗತ್ಯವಿರುವ ಎಲ್ಲ ಪೂರಕ ಸೌಲಭ್ಯಗಳನ್ನು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಲ್ ಗೌರವ್ ತೊಪ್ಪಾ, ಪಾಲಿಕೆಯ ಉಪ ಆಯುಕ್ತ ಯೋಗಾನಂದ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರಾದ ಮೇಜರ್ ಜೆ.ಆರ್.ಬಾಲಸುಬ್ರಹ್ಮಣ್ಯಂ, ಡಿಪಿಇಒ ಎಸ್.ಸಿದ್ದರಾಜು, ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದರಾಜು, ಶ್ರೀಕಂಠೇಶ್ವರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಜಗದೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.