ಮೈಸೂರು: ವೇತನ ಪರಿಷ್ಕರಣೆಗೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರು ಮಾನಸಗಂಗೋತ್ರಿಯ ಮುಖ್ಯದ್ವಾರದಲ್ಲಿರುವ ಕುವೆಂಪು ಪ್ರತಿಮೆ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.
ಅತಿಥಿ ಉಪನ್ಯಾಸಕರ ಬಳಗದ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಅನಿರ್ದಿಷ್ಟಾವಧಿವರೆಗೆ ಮುಂದುವರಿಸಲು ಪ್ರತಿಭಟನಾಕಾರರು ತೀರ್ಮಾನಿಸಿದ್ದಾರೆ. ಬೇಡಿಕೆ ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಪಟ್ಟುಹಿಡಿದ್ದಾರೆ. ವಿವಿಧ ಅಧ್ಯಯನ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಅತಿಥಿ ಉಪನ್ಯಾಸಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮೈವಿವಿಯಿಂದ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳವಾಗಿಲ್ಲ. ಈ ಕುರಿತು ಹಲವು ವರ್ಷಗಳಿಂದ ಮುಖ್ಯಮಂತ್ರಿ ಮತ್ತು ಕುಲಪತಿಗೆ ಮನವಿ ಸಲ್ಲಿಸಲಾಗಿದೆ. ಇದಕ್ಕೆ ಸ್ಪಂದಿಸಿ ಸಿಂಡಿಕೇಟ್ ಸಭೆಯಲ್ಲಿ ಅತಿಥಿ ಉಪನ್ಯಾಸಕರ ಗೌರವಧನವನ್ನು ಅ.1ರಿಂದ ಅನ್ವಯವಾಗುವಂತೆ ಪರಿಷ್ಕರಿಸಲು ನಿರ್ಣಯ ಕೈಗೊಳ್ಳಲಾಗಿದೆ. ಡಿ. 9ರಂದು ನಡೆದ ಸಿಂಡಿಕೇಟ್ ಸಭೆಯು ಅತಿಥಿ ಉಪನ್ಯಾಸಕರಿಗೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಡಿ.1ರಿಂದ ಅನ್ವಯವಾಗುವ ಆದೇಶವನ್ನು ನೀಡಲು ತೀರ್ಮಾನಿಸಲಾಗಿದೆ. ಆದರೆ, ಅದು ಕಾಗದದಲ್ಲಿ ಮಾತ್ರ ಉಳಿದಿದೆ. ಆದೇಶ ಕಾರ್ಯರೂಪಕ್ಕೆ ಬಂದಿಲ್ಲ ಎಂದು ದೂರಿದರು.
ವಿದ್ಯಾರ್ಥಿಗಳಿಗೆ ಎದುರಿಸಬೇಕಾಗಬಹುದಾದ ತೊಂದರೆ ಪರಿಗಣಿಸಿ, ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿನ ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮೌಖಿಕ ಆದೇಶದ ಆಧಾರದ ಮೇಲೆ ಪ್ರವೇಶ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ಇನ್ನೂ ಲಿಖಿತ ಆದೇಶ ಹೊರಡಿಸದಿರುವುದು ಸರಿಯಲ್ಲ ಎಂದು ಕಿಡಿಕಾರಿದರು.
ಪರಿಷ್ಕೃತ ಗೌರವಧನವನ್ನು ಪಾವತಿಸುವಂತೆ ನಾವು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕಳೆದ ಒಂದು ತಿಂಗಳಿನಿಂದ ಅಧಿಕಾರಿಗಳು ಕುಂಟು ನೆಪ ಹೇಳಿಕೊಂಡೇ ಕಾಲ ಕಳೆಯುತ್ತಿದ್ದಾರೆ ಎಂದು ದೂರಿದರು. ಬಳಗದ ಮುಖಂಡ ಡಾ.ಚಂದ್ರಶೇಖರ್ ಇನ್ನಿತರರು ಇದ್ದರು.