ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಮೂವರು ಮಹನೀಯರು ಭಾಜನರಾಗಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ಮಾಜಿ ಸಂಸದ ಡಾ.ಎ.ಸಿ.ಷಣ್ಮುಗಂ, ಸಾರಿಗೆ ಮತ್ತು ಸಂಚಾರ ಇಂಜಿನಿಯರ್ ಡಾ.ಬಾಬು ಕೆ.ವೀರೇಗೌಡ ಮತ್ತು ಸಮಿ ಸಬಿನ್ಸಾ ಗ್ರೂಪ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಶಾಹೀನ್ ಮಜೀದ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.
ಜ.18ರಂದು ಬೆಳಗ್ಗೆ 11ಕ್ಕೆ ಕ್ರಾಫರ್ಡ್ ಭವನದಲ್ಲಿ ನಡೆಯುವ ಮೈಸೂರು ವಿಶ್ವವಿದ್ಯಾಲಯದ 105ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಅವರು ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಿದ್ದಾರೆ.
2020ರಲ್ಲಿ ನಡೆದ ಮೈವಿವಿ 100ನೇ ಘಟಿಕೋತ್ಸವಕ್ಕೆ ಗೈರಾಗಿದ್ದ ಇನ್ಫೋಸಿಸ್ ಪ್ರತಿಷ್ಠಾನದ ಸಂಸ್ಥಾಪಕಿ, ರಾಜ್ಯಸಭಾ ಸದಸ್ಯೆ ಡಾ.ಸುಧಾಮೂರ್ತಿ ಅವರಿಗೂ ಗೌರವ ಡಾಕ್ಟರೇಟ್ ನೀಡಲಾಗುತ್ತದೆ ಎಂದು ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.