ಜಿಲ್ಲೆ

ಮೊದಲ ಬಾರಿಗೆ ಆರೋಗ್ಯ, ಕೈಗಾರಿಕಾ ದಸರಾ

reportermys

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಪೂರ್ವಭಾವಿ ಸಭೆ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.

ದಸರಾ ಕಾರ್ಯಕ್ರಮಗಳ ಆಯೋಜನೆ ಸಂಬಂಧ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದುಕೊಂಡರು. ಹೊರ ರಾಜ್ಯಗಳಿಂದ ಆಗಮಿಸುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಹೆಸರನ್ನು ಸೇರ್ಪಡೆ ಮಾಡುವಂತೆ ಸೂಚಿಸಿದರು.

ಮೈಸೂರಿಗೆ ಆಗಮಿಸುವ ಪ್ರವಾಸಿಗರು ಕೆಆರ್‌ಎಸ್, ಶ್ರೀರಂಗಪಟ್ಟಣ ಸೇರಿದಂತೆ ಮಂಡ್ಯ ಜಿಲ್ಲೆಯ ನಾನಾ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ತೆರಳುವ ಸಂದರ್ಭದಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ. ಹೀಗಾಗಿ, ಅಂತಾರಾಜ್ಯ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವಾಗ ಮಂಡ್ಯ ಜಿಲ್ಲೆಯ ಹೆಸರು ಕೂಡ ಸೇರ್ಪಡೆ ಮಾಡಬೇಕು ಎಂದರು.

ಇದೇ ಮೊದಲ ಬಾರಿಗೆ ಆರೋಗ್ಯ ಮತ್ತು ಕೈಗಾರಿಕಾ ದಸರಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಮಂಜುನಾಥ್‌ಸ್ವಾಮಿ ತಿಳಿಸಿದರು.
ಆರೋಗ್ಯ ಮೇಳ ಹಾಗೂ ಆರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ವಸ್ತುಪ್ರದರ್ಶನ ಆಯೋಜಿಸಲು ಜಿಲ್ಲಾ ಆರೋಗ್ಯ ಕಲ್ಯಾಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ನಾಲ್ಕು ದಿನ ಕೈಗಾರಿಕಾ ದಸರಾ ಆಚರಣೆಗೆ ಕೈಗಾರಿಕಾ ಸಂಘದವರು ಮನವಿ ಮಾಡಿದ್ದಾರೆ ಎಂದು ಎಡಿಸಿ ಮಾಹಿತಿ ನೀಡಿದರು.

ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ದಸರಾ ವಸ್ತುಪ್ರದರ್ಶನ, ಫಲಪುಷ್ಪ ಪ್ರದರ್ಶನ ವೀಕ್ಷಣೆ ಮಾಡುವ ಸಂಬಂಧ ಏಕೀಕೃತ ಟಿಕೆಟ್ ನೀಡುವ ಬಗ್ಗೆ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದರು.

ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಪೊಲೀಸ್ ಆಯುಕ್ತ ಚಂದ್ರಗುಪ್ತ, ಜಿಪಂ ಸಿಇಒ ಬಿ.ಆರ್.ಪೂರ್ಣಿಮಾ, ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.