ಬೆಳಗಾವಿ/ ಸವದತ್ತಿ: ರಾಜ್ಯದ ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಯಲ್ಲಮ್ಮನ ಗುಡ್ಡದ ದೇವಸ್ಥಾನ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಹೊಸ ಕಟ್ಟಡಗಳ ನಿರ್ಮಾಣ ಮಾಡಬೇಡಿ ಎಂದು ಅಧಿಕಾರಿಗಳಿಗೆ ಸಂಸದ ಜಗದೀಶ ಶೆಟ್ಟರ್ ಸೂಚಿಸಿದರು.
ಸವದತ್ತಿ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಬಳಿಕ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಚೀನ ಕಾಲದ ಯಲ್ಲಮ್ಮ ದೇವಸ್ಥಾನವು ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿ ಬರುತ್ತದೆ. ಹಾಗಾಗಿ ಪುರಾತ್ವತ ಇಲಾಖೆಯ ನಿಯಮ ಪ್ರಕಾರ ದೇವಸ್ಥಾನ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ, ಅಭಿವೃದ್ಧಿ ಚಟುವಟಿಕೆ ಕೈಗೊಳ್ಳಬಾರದು. ಈ ಕುರಿತು ಅಧಿಕಾರಿಗಳು, ದೇವಸ್ಥಾನ ಪರ ವಕೀಲರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಎಂದರು.
ಈಗಾಗಲೇ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯು ಜಾಗತಿಕ ಆರ್ಥಿಕ ಪ್ರವಾಸಿ ಕೇಂದ್ರದ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ತಿರುಪತಿ ಮಾದರಿಯಲ್ಲಿ ಭಕ್ತರ ದರ್ಶನಕ್ಕಾಗಿ ಕ್ಯೂ ಕಾಂಪ್ಲೆಕ್ಸ್, ಸಾರ್ವಜನಿಕ ಶೌಚ, ಸ್ನಾನ ಗೃಹಗಳು, ಅನ್ನದಾಸೋಹ ಕೇಂದ್ರ ಸ್ಥಾಪಿಸಬೇಕು. ದೇವಸ್ಥಾನದಿಂದ ದೂರದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಹಾಳಾಗಿರುವ ರಸ್ತೆ ಅಭಿವೃದ್ಧಿ ಹಾಗೂ ಎಲ್ಲ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿಯೇ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಬರುತ್ತಿರುವ ಹಿನ್ನೆಲೆ ಅವರಿಗೆಲ್ಲ ಅನುಕೂಲ ಕಲ್ಪಿಸಲು ಹೊಸದಾಗಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 1990ರಲ್ಲಿ ಒಮ್ಮೆ ಸಮೀಕ್ಷೆ ಆಗಿದ್ದು, ಮರು ಸಮೀಕ್ಷೆ ನಡೆಸುವಂತೆ ರೈಲ್ವೆ ಇಲಾಖೆಗೆ ಪತ್ರ ಬರೆದಿದ್ದೇನೆ. ರೈಲ್ವೆ ಮಾರ್ಗ ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಆಯುಕ್ತೆ ಗೀತಾ ಕೌಲಗಿ, ದೇವಸ್ಥಾನ ಅಭಿವದ್ಧಿ ಪ್ರಾಧಿಕಾರ ಕಾರ್ಯದರ್ಶಿ ಅಶೋಕ ದುಡಗುಂಟಿ, ವಿರೂಪಾಕ್ಷ ಮಾಮನಿ, ಸೌರಭ್ ಚೋಪ್ರಾ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ. ನಯನಾ ಭಸ್ಮೆ, ನರಸಿಂಹ ಕುಲಕರ್ಣಿ ಇತರರಿದ್ದರು.
ಈಗಾಗಲೇ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯು ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗಾಗಿ ಬಿಡುಗಡೆ ಮಾಡಿರುವ 100 ಕೋಟಿ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆ ರೂಪಿಸಿ ಅನುಮೋದನೆ ಪಡೆಯಲಾಗುತ್ತಿದೆ. ನಿಗದಿತ ಸಮಯದಲ್ಲಿಯೇ ಎಲ್ಲ ಕಾಮಗಾರಿ ಪೂರ್ಣಗೊಳಿಸಲಾಗುವುದು. | ಗೀತಾ ಕೌಲಗಿ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಆಯುಕ್ತರು