ಹಾಸನ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯ ವಲಯದಲ್ಲಿ ಹೊಸ ಹೊಸ ಬೆಳವಣಿಗೆಗಳು ಆಗಲಾರಂಭಿಸಿವೆ. ಇಷ್ಟು ದಿನ ‘ಹಾಸನ ಕ್ಷೇತ್ರದಲ್ಲಿ ಎಚ್.ಡಿ. ರೇವಣ್ಣ ನನ್ನ ವಿರುದ್ಧ ಸ್ಪರ್ಧಿಸಿದರೆ 50 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವೆ’ ಎಂಬುದಾಗಿ ಆತ್ಮವಿಶ್ವಾಸದ ಮಾತುಗಳನ್ನಾಡುತ್ತಿದ್ದ ಹಾಸನ ಕ್ಷೇತ್ರದ ಶಾಸಕ ಬಿಜೆಪಿ ಶಾಸಕ ಪ್ರೀತಮ್‌ಗೌಡ ‘ನಾನು ಸಹ ಹಾಸನ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆ ಎಂಬುದರ ಮೇಲೆ ಮುಂದಿನ ಬೆಳವಣಿಗೆಗಳು ನಿರ್ಧಾರ ಆಗುತ್ತವೆ’ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಹಾಸನ ಕ್ಷೇತ್ರಕ್ಕೆ ತಾವೇ ಜೆಡಿಎಸ್ ಅಭ್ಯರ್ಥಿ ಎಂಬುದಾಗಿ ಜಿಪಂ ಮಾಜಿ ಸದಸ್ಯೆ ಭವಾನಿ ರೇವಣ್ಣ ಅವರು ಘೋಷಿಸಿಕೊಂಡಿರುವ ಕುರಿತು ಪ್ರತಿಕ್ರಿಯೆ ಪಡೆಯಲು ಸುದ್ದಿಗಾರರು ಮಂಗಳವಾರ ಶಾಸಕ ಪ್ರೀತಮ್‌ಗೌಡರನ್ನು ಭೇಟಿ ಮಾಡಿದಾಗ, ಹಾಸನ ಕ್ಷೇತ್ರದ ಶಾಸಕನಾಗಿ ಉತ್ತಮ ಕೆಲಸ ಮಾಡಿದ್ದು, ಮತ್ತೊಮ್ಮೆ ಅವಕಾಶ ಕೊಡಿ ಎಂಬುದಾಗಿ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ್ದೇನೆ. ನಮ್ಮದು ರಾಷ್ಟ್ರೀಯ ಪಕ್ಷ, ಟಿಕೆಟ್ ಕೊಡಬಹುದು ಅಥವಾ ಬೇರೆ ಕ್ಷೇತ್ರದಲ್ಲಿ ನಿಲ್ಲುವಂತೆ ಸೂಚಿಸಬಹುದು. ಆದ್ದರಿಂದ ಮೊದಲು ಯಾವ ಪಕ್ಷದಿಂದ ಯಾರು ಅಭ್ಯರ್ಥಿ ಎಂಬುದು ನಿರ್ಧಾರ ಆಗಲಿ, ನಂತರ ಸೂಕ್ತ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ಈ ಬಾರಿ ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರಗಳನ್ನು ಬಿಜೆಪಿ ಗೆದ್ದುಕೊಂಡು ಅಚ್ಚರಿಯ ಫಲಿತಾಂಶ ನೀಡಲಿದೆ. ನಾಲ್ಕು ಕ್ಷೇತ್ರಗಳನ್ನು ಗೆದ್ದುಕೊಂಡು ಬರುವ ಹೊಣೆಗಾರಿಕೆಯನ್ನು ಪಕ್ಷದ ನಾಯಕರು ನನಗೆ ವಹಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಕೆ. ಸುರೇಶ್ ಜೊತೆ ಸೇರಿ ಆ ಕಾರ್ಯ ಸಾಧಿಸಲಾಗುವುದು ಎಂದರು.