pardವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯಕ್ಕೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಿಸಿದ ನಂತರ ಕೆಬಿಜೆಎನ್‌ಎಲ್ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಕಾಮಗಾರಿ ಕುರಿತು ಸಭೆ ನಡೆಸಿದರು. 
ಜಿಲ್ಲೆ

ಯುಕೆಪಿ 3ನೇ ಹಂತ ರಾಷ್ಟ್ರೀಯ ಯೋಜನೆಗೆ ಪ್ರಸ್ತಾವನೆ

ವಿಜಯಪುರ:
ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತವನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಬೇಕು ಎಂದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯಕ್ಕೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಿಸಿದ ನಂತರ ಕೆಬಿಜೆಎನ್‌ಎಲ್ ಅಧಿಕಾರಿಗಳ ಸಭೆ ನಡೆಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರೀಯ ಯೋಜನೆ ಘೋಷಣೆಯಾದರೆ ಹೆಚ್ಚಿನ ಅನುದಾನ ಪಡೆದುಕೊಂಡು ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬಹುದು ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತ ಪೂರ್ಣಗೊಳ್ಳಲು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯಗಳು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲು ಸುಮಾರು 1 ಲಕ್ಷ ಕೋಟಿ ರೂ.ಗಳ ಅಗತ್ಯವಿದೆ. 2023 ರ ಅಂದಾಜಿನ ಪ್ರಕಾರ 83,700 ಕೋಟಿ ರೂ. ಇದ್ದು, ಯೋಜನೆ ಪೂರ್ಣಗೊಳ್ಳುವವರೆಗೆ 1 ಲಕ್ಷ ಕೋಟಿ ರೂ. ವೆಚ್ಚವಾಗುವ ಸಾಧ್ಯತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯಸರ್ಕಾರ ಯೋಜನೆಯ ಕಾಮಗಾರಿ ಕೈಗೆತ್ತಿಕೊಳ್ಳಲು ಸಿದ್ಧವಿದ್ದು, ಕೇಂದ್ರ ಸರ್ಕಾರ ತ್ವರಿತಗತಿಯಲ್ಲಿ ಅಧಿಸೂಚನೆ ಹೊರಡಿಸಬೇಕಾಗಿದೆ. ಯೋಜನೆಯ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯಗಳು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚಿನ ಗಮನಹರಿಸಲಾಗುವುದು ಎಂದು ಅವರು ಹೇಳಿದರು.

ಕೃಷ್ಣಾನದಿ ಜಲವಿವಾದಕ್ಕೆ ಸಂಬಂಧಿಸಿದಂತೆ ಬ್ರಿಜೇಶಕುಮಾರ ನೇತೃತ್ವದ ನ್ಯಾಯಾಧೀಕರಣದ ಐ-ತೀರ್ಪುಗೆ ಸಂಬಂಧಿಸಂತೆ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆದಿದೆ, ತೀರ್ಪಿನ ವಿರುದ್ಧ ತೆಲಂಗಾಣ, ಆಂಧ್ರಪ್ರದೇಶ ಆಕ್ಷೇಪ ಹೊರಹಾಕಿವೆ, ಈ ಕಾರಣಕ್ಕಾಗಿ ಗೆಜೆಟ್ ನೋಟಿಫಿಕೇಷನ್ ಸಾಧ್ಯವಾಗುತ್ತಿಲ್ಲ, ಹೀಗಾಗಿ ಮೂರನೇಯ ಹಂತದ ಯೋಜನೆಗೆ ದೊಡ್ಡ ಅಡ್ಡಗಾಲಾಗಿದೆ ಎಂದು ಹೇಳಿದರು.

ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ ಮಾತನಾಡಿ, ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, 21 ಸಾವಿರ ಕೋಟಿ ರೂ. ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಲಾಗಿದೆ.ಈ ಭಾಗದಲ್ಲಿ ನೀರಾವರಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ಈ ಭಾಗದ ರೈತರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಪುನರ್ ವಸತಿ, ಪುನರ್ ನಿರ್ಮಾಣ ವಿಚಾರ ಕುರಿತು ಚರ್ಚಿಸಲು ಈ ಭಾಗದ ಶಾಸಕರು, ಸಚಿವರು ಸೇರಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಚರ್ಚಿಸಿ, ರೈತರ ಪುನರ್ ವಸತಿಗೆ ಕ್ರಮ ವಹಿಸಲಾಗುವುದು. ಯಾವುದೇ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಂಡು ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಒಟ್ಟಾರೆ ನಿರಂತರ ನೀರು ಸದ್ಭಳಕೆಯಾಗುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು.

ಕಂದಾಯ ಸಚಿವ ಕೃಷ್ಣ ಭೈರೇಗೌಡ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ಬಾಗಲಕೋಟ ಸಂಸದರಾದ ಪಿ. ಗದ್ದಿಗೌಡರ, ವಿಜಯಪುರ ಸಂಸದ ರಮೇಶ ಜಿಗಜಿಣಗಿ ಶಾಸಕರಾದ ಯಶವಂತರಾಯಗೌಡ ಪಾಟೀಲ, ಅಪ್ಪಾಜಿ ಸಿ.ಎಸ್. ನಾಡಗೌಡ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ವಿಧಾನ ಪರಿಷತ್ ಸದಸ್ಯರಾದ ಪಿ.ಎಚ್. ಪೂಜಾರ, ಪ್ರಕಾಶ ರಾಠೋಡ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

  • ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ
    ಈ ಭಾಗದ ಬಹುದಿನದ ಬೇಡಿಕೆಯಾಗಿರುವ ಕೆಬಿಜೆಎನ್‌ಎಲ್ ಕಚೇರಿ ಆಲಮಟ್ಟಿಗೆ ಸ್ಥಳಾಂತರಗೊಳಿಸುವ ಕುರಿತು ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯನ್ನು ಆಲಮಟ್ಟಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಸ್ಥಳಾಂತರಿಸುವ ಕಾರ್ಯ ಶೀಘ್ರದಲ್ಲಿಯೇ ನಡೆಯಲಿದೆ ಸಿಎಂ ಸಿದ್ದರಾಮಯ್ಯ ಹೇಳಿದರು.