ತೂಬಗೆರೆ: ಯುವಕರನ್ನು ಕೃಷಿಯತ್ತ ಸೆಳೆಯುವ ನಿಟ್ಟಿನಲ್ಲಿ ಕೃಷಿ ವಿಜ್ಞಾನ ಕೇಂದ್ರಗಳಿಂದ ಪ್ರಾಯೋಗಿಕ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ರಾಜೇಂದ್ರಪ್ರಸಾದ್ ತಿಳಿಸಿದರು.
ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಸ್ಥಾಪನೆಯ 15ನೇ ವಾರ್ಷಿಕೋತ್ಸವ ನಿಮಿತ್ತ ಮಂಗಳವಾರ ಆಯೋಜಿಸಿದ್ದ ಹೆಜ್ಜೆ ಗುರುತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರಿಗೆ ಮಾರುಕಟ್ಟೆ ಒದಗಿಸಿ, ಆದಾಯ ದ್ವಿಗುಣಗೊಳಿಸಲು ಕೃಷಿ ವಿಜ್ಞಾನ ಕೇಂದ್ರಗಳು ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಮಾದರಿಯಾಗಿವೆ ಎಂದರು.
ರೈತರು ಸಮಗ್ರ ಕೃಷಿ ಪದ್ಧತಿ ಅನುಸರಿಸಿ, ಕೃಷಿಯನ್ನು ಲಾಭದಾಯಕಗೊಳಿಸಬೇಕಿದೆ. ಸಹಜವಾದ ಕೃಷಿಯೊಂದಿಗೆ ಹೂವು, ತರಕಾರಿ ಬೆಳೆಯುವುದು, ಸ್ವಾಭಾವಿಕ ಸಂಪನ್ಮೂಲಗಳ ಸದ್ಬಳಕೆ ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಹೊಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಕೃಷಿ ವಿಜ್ಞಾನ ಕೇಂದ್ರಗಳು ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ನೀರು, ಮಣ್ಣು ಮತ್ತಿತರ ನೈಸರ್ಗಿಕ ಸಂಪತ್ತು ಉಳಿಸಿಕೊಳ್ಳಲು ರೈತರಿಗೆ ಪ್ರಾಯೋಗಿಕ ಕಾರ್ಯಕ್ರಮ ರೂಪಿಸುತ್ತ ಮಾದರಿಯಾಗಿವೆ ಎಂದರು.
ಕೃಷಿ ತಂತ್ರಜ್ಞಾನ ಅಳವಡಿಕೆ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ವಿ.ವೆಂಕಟಸುಬ್ರಮಣಿಯನ್ ಮಾತನಾಡಿ, ನಮ್ಮ ದೇಶವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಕೃಷಿಯಲ್ಲಿ ನೂತನ ಆವಿಷ್ಕಾರಗಳು ನಡೆಯುತ್ತಿವೆ. ರೈತರು ಕೃಷಿ ಉತ್ಪನ್ನಗಳಷ್ಟೇ ಅಲ್ಲದೇ ಉಪ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡಲು ಗಮನಹರಿಸಬೇಕು ಎಂದು ಹೇಳಿದರು.
ಕಿಸಾನ್ ಆ್ಯಪ್‌ಗಳಲ್ಲಿ ಉತ್ಪನ್ನಗಳ ಕುರಿತು ಪ್ರಚಾರ ಕೈಗೊಳ್ಳಬೇಕು. ರಾಮನಗರದ ರೈತರ ಉತ್ಪನ್ನಗಳು ಕೇರಳದಲ್ಲಿ ಮಾರಾಟವಾಗುತ್ತಿವೆ. ಇದನ್ನು ಸ್ವತಃ ಕಂಡಿದ್ದೇನೆ. ಕೃಷಿ ವಿಜ್ಞಾನ ಕೇಂದ್ರಗಳು ಇಂಥ ಕಾರ್ಯಕ್ರಮಗಳ ಮೂಲಕ ರೈತರ ಆರ್ಥಿಕ ಸ್ವಾವಲಂಬನೆಗೆ ಒತ್ತಾಸೆಯಾಗಿ ನಿಲ್ಲಬೇಕು ಎಂದು ಸಲಹೆ ನೀಡಿದರು.
ಕೃಷಿ ವಿವಿಯ ವಿಶ್ರಾಂತ ಕುಲಪತಿ ಡಾ.ಕೆ.ನಾರಾಯಣಗೌಡ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಮಲ್ಲಿಕಾರ್ಜುನಗೌಡ ಮಾತನಾಡಿದರು.
ಬೆಂಗಳೂರು ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ.ಎಂ.ಬೈರೇಗೌಡ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.
ಕೃಷಿ ವಿವಿಯ ವಿಶ್ರಾಂತ ವಿಸ್ತರಣಾ ನಿರ್ದೇಶಕರು, ಕೃಷಿ ತಂತ್ರಜ್ಞಾನ ಅಳವಡಿಕೆ ಸಂಶೋಧನಾ ಸಂಸ್ಥೆ ನಿರ್ದೇಶಕರು, ಕೃಷಿ ವಿಜ್ಞಾನ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ ಮುಖ್ಯಸ್ಥರು ಹಾಗೂ ವಿಜ್ಞಾನಿಗಳು ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ಕೃಷಿ ವಿವಿಯ ಮುಖ್ಯಸ್ಥರಾದ ಸಾವಿತ್ರಮ್ಮ, ಹಾಡೋನಹಳ್ಳಿ ಪ್ರಗತಿಪರ ರೈತ ಎಚ್. ಅಪ್ಪಯ್ಯಣ್ಣ, ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ. ಜಿ. ಈಶ್ವರಪ್ಪ. ಕೃಷಿ ವಿಜ್ಞಾನ ಕೇಂದ್ರದ ನಿಕಟಪೂರ್ವ ಮುಖ್ಯಸ್ಥ ಡಾ. ಎಸ್.ವಿ. ಸುರೇಶ್ ಮತ್ತಿತರರಿದ್ದರು.